ಉದಯವಾಹಿನಿ, ಬಳ್ಳಾರಿ: ಜಿಲ್ಲೆಯ ವಿವಿಧ ತಾಲೂಕು ಹಾಗೂ ಗ್ರಾಮಗಳಲ್ಲಿ ‘ಬರ ನಿರ್ವಹಣೆ’ಗೆ ಸಂಬಂಧಿಸಿದಂತೆ ಎದುರಿಸಲು ಸನ್ನದ್ಧರಾಗಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರದಂದು, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡೀಯೋ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬರ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ತಾಲೂಕು ಮಟ್ಟದಲ್ಲಿ ಟಾಸ್ಕ್‍ಫೋರ್ಸ್ ಸಮಿತಿ ರಚಿಸಲಾಗಿದ್ದು, ಸಮಿತಿಯ ನೋಡೆಲ್ ಅಧಿಕಾರಿಗಳು ತಾಲೂಕು ಹಾಗೂ ಗ್ರಾಮಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ದನ-ಕರುಗಳಿಗೆ ಮೇವು ಸಮಸ್ಯೆ ಹಾಗೂ ಇತರೆ ಸಮಸ್ಯೆ ಕುರಿತು ಮಾಹಿತಿ ವರದಿ ಮಾಡಲಿದ್ದಾರೆ ಎಂದರು.
ಈಗಾಗಲೇ ಆಯಾ ತಾಲೂಕುಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು, ಮೊದಲನೇ ಹಂತದ ಬರ ಸಮೀಕ್ಷೆ ನಡೆಸಿದ್ದು, ಮತ್ತೊಮ್ಮೆ ಬೆಳೆ ಪರಿಸ್ಥಿತಿ ಕುರಿತು ನಿಜ ಸಮೀಕ್ಷಾ ವರದಿ ನಡೆಸಿ ಕಾಲಮಿತಿಯಲ್ಲಿ ಮಾಹಿತಿ ಸಿದ್ಧಪಡಿಸಬೇಕು. ಕೇಂದ್ರದಿಂದ ಬರ ಸಮೀಕ್ಷೆ ತಂಡ ಬರಲಿದೆ. ಯಾವ ವಿಧದ ಭೂಮಿ, ಬೆಳೆ ಹಾಗೂ ಎಷ್ಟು ವ್ಯಾಪ್ತಿಯಿದೆ ಎಂಬುದರ ಬರ ಸಮೀಕ್ಷೆ ಮಾಹಿತಿಯನ್ನು ಶೀಘ್ರವಾಗಿ ಜಿಲ್ಲಾಡಳಿತಕ್ಕೆ ನೀಡಬೇಕು. ಸೆ.30ರೊಳಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.
ಹೆಚ್‍ಎಲ್‍ಸಿ ಮತ್ತು ಎಲ್‍ಎಲ್‍ಸಿ ಕಾಲುವೆಗಳಿಗೆ ಈಗಾಗಲೇ ನೀರಿ ಹರಿಸಲಾಗುತ್ತಿದ್ದು, ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಲು ಕ್ರಮವಹಿಸಬೇಕು. ಈ ಕುರಿತು ಆಯಾ ತಾಲೂಕು ತಹಶೀಲ್ದಾರರು ನೋಡಿಕೊಳ್ಳಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆಯಾದಲ್ಲಿ ನೀರಿನ ಟ್ಯಾಂಕರ್ ಇರಿಸಿಕೊಳ್ಳಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಜಿಲ್ಲೆಯ 114 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದು. ಎಸ್‍ಡಿಆರ್‍ಎಫ್ ಮಾರ್ಗಸೂಚಿ ಅನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸದ ಕೊಳವೆಬಾವಿಗಳನ್ನು ಗುರ್ತಿಸಿ, ಮರಳಿ ಪುನಃಶ್ಚೇತನಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ನಗರದಲ್ಲಿ ಹಾಗೂ ತಾಲೂಕುಗಳಲ್ಲಿ ಅಂಗನವಾಡಿ, ಶಾಲಾ ಕಟ್ಟಡ ಮತ್ತು ಆರೋಗ್ಯ ಕೇಂದ್ರ, ವಸತಿ ಶಾಲೆಗಳಿಗೂ ಕಟ್ಟಡಗಳ ಭೂಮಿಯ ಕೊರತೆಯಿದ್ದಲ್ಲಿ ಆಯಾ ತಹಶೀಲ್ದಾರರು ಹೃದಯ ಭಾಗದಲ್ಲಿ ಸರ್ಕಾರಿ ಭೂಮಿ ಗುರುತಿಸಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ ರೈತರು ಯಾವುದೇ ಕಾರಣಕ್ಕೂ ದೃತಿಗೇಡಬಾರದು. ಬ್ಯಾಂಕ್‍ಗಳಿಂದ ಸಾಲಪಡೆದ ರೈತರಿಗೆ ಲೇವಾದೇವಿದಾರರಿಂದ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು ಮತ್ತು ನಿಗಾವಹಿಸಬೇಕು. ಈ ನಿಟ್ಟಿನಲ್ಲಿ ಆಯಾ ತಾಲೂಕು ತಹಶೀಲ್ದಾರ ಹಾಗೂ ತಾಪಂ ಇಒಗಳು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗದಂತೆ ಜಾಗ್ರತೆ ವಹಿಸಬೇಕು ಎಂದು ಡಿಸಿ ಸೂಚಿಸಿದರು.
ಪ್ರತಿ ತಿಂಗಳು ಹಾಸ್ಟೆಲ್‍ಗಳಿಗೆ ದಿಢೀರ್ ಭೇಟಿ ನೀಡಿ, ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸಬೇಕು. ಅಲ್ಲಿನ ಸಮಸ್ಯೆ ವರದಿ ಮಾಡಿ ಸರಿಪಡಿಸಬೇಕು ಈ ಕುರಿತು ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!