ಉದಯವಾಹಿನಿ  ಚಿತ್ರದುರ್ಗ: ವಿಕಲಚೇತನರ ಸಬಲೀಕರಣಕ್ಕಾಗಿ ಕಳೆದ 9 ವರ್ಷಗಳಲ್ಲಿ 14,174 ಮೌಲ್ಯಮಾಪನ ಶಿಬಿರ ನಡೆಸಿ, 26 ಲಕ್ಷಕ್ಕೂ ಅಧಿಕ ಅಂಗವಿಕಲ ಫಲಾನುಭವಿಗಳಿಗೆ ಅಗತ್ಯ ಸಾಧನ-ಸಲಕರಣೆಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಭಾನುವಾರ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ (ದಿವ್ಯಾಂಗಜನ್), ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಕೋ), ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ಸಾಮಾಜಿಕ ಅಧಿಕಾರಿತಾ ಶಿಬಿರ-ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅಂಗವಿಕಲರು ಸಮಾಜದಲ್ಲಿ ಎಲ್ಲರಂತೆ ಬದುಕಲಿ ಎಂಬ ದೃಷ್ಟಿಯಿಂದ ಶಸ್ತ್ರಚಿಕಿತ್ಸೆ, ಸ್ಕಾಲರ್‍ಶಿಪ್, ಸಾಧನ-ಸಲಕರಣೆ, ಕೌಶಲ ತರಬೇತಿ, ಸಾಲ ಸೌಲಭ್ಯ ಸೇರಿ ಇತರೆ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅವುಗಳನ್ನು ಪ್ರಾಮಾಣಿಕವಾಗಿ ತಲುಪಿಸಲು ಸಿದ್ಧನಿದ್ದೇನೆ. ನಿಮ್ಮ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಿದ್ದೇನೆ ಎಂದು ಭರವಸೆ ನೀಡಿದರು.ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ವಿಕಲಚೇತನರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ವಿಶ್ವದ ಇತರೆ ದೇಶಗಳಿಗೆ ಹೋಲಿಕೆ ಮಾಡಿದಾಗ ನಮ್ಮ ದೇಶದಲ್ಲಿ ಹೆಚ್ಚಿನ ಮಾನವ ಸಂಪನ್ಮೂಲ ಇದೆ. ದೇಶದ ಒಬ್ಬೊಬ್ಬ ವ್ಯಕ್ತಿಯಲ್ಲಿನ  ಮಾನವ ಸಂಪನ್ಮೂಲದ ಶಕ್ತಿಯನ್ನು ಹೆಚ್ಚಿಸುವ ಗುರಿಯೊಂದಿಗೆ ವಿಶೇಷಚೇತನರನ್ನೂ ಮುಖ್ಯವಾಹಿನಿಗೆ ತರುವನಿಟ್ಟಿನಲ್ಲಿ ಈ ಮಾನವ ಸಂಪನ್ಮೂಲವನ್ನು ದೇಶದ ಬೆಳವಣಿಗೆಗೆ ಅವರು ಕೂಡ ಪಾತ್ರರಾಗಬೇಕು ಎಂದರು.  ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಅಲಿಂಕೋ ಹಿರಿಯ ವ್ಯವಸ್ಥಾಪಕ ಅಶೋಕ್ ಕುಮಾರ್ ಸೇರಿದಂತೆ ವಿಕಲಚೇತನ ಫಲಾನುಭವಿಗಳು ಇದ್ದರು.

Leave a Reply

Your email address will not be published. Required fields are marked *

error: Content is protected !!