ಉದಯವಾಹಿನಿ, ಮಾಲೂರು : ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆಯಿತು.
ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ನೀಡಿದರು, ಕಾವೇರಿಗಾಗಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತಮಿಳುನಾಡಿಗೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿರುವ ಕನ್ನಡಪರ ಹಾಗೂ ಪ್ರಗತಿಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾಲೂರು ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಮುಚ್ಚಿ ಬೆಂಬಲ ಸೂಚಿಸಿದರೆ, ಆಟೋಗಳ ಸಂಚಾರ ಬೆರಳೆಣಿಕೆಯಷ್ಟಿತ್ತು, ಖಾಸಗಿ ಬಸ್‌ಗಳನ್ನು ರಸ್ತೆಗೆ ಇಳಿಸದೆ ಬಂದ್ ಬೆಂಬಲ ನೀಡಿದ್ದರು. ಬಂದ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಲಾಗಿತ್ತು, ಸರ್ಕಾರಿ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿರಲಿಲ್ಲ, ಖಾಸಗಿ ಶಾಲಾ ಕಾಲೇಜುಗಳ ಆಡಳಿತಮಂಡಳಿಗಳು ಬಂದ್‌ಗೆ ಬೆಂಬಲ ವ್ತಕ್ತ ಪಡಿಸಿ ರಜೆ ಘೋಷಿಸಿದರು. ಸರ್ಕಾರಿ ಕಛೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದರು, ಸಾರ್ವಜನಿಕರು ಇಲ್ಲದೆ ಕಚೇರಿಗಳು ಬಿಕೋ ಎನ್ನುತ್ತಿದ್ದವು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳು ಎಂದಿನಂತೆ ಸಂಚರಿಸುತ್ತಿದ್ದವು ಆದರೆ ಬಸ್ಸುಗಳಲ್ಲಿ ಪ್ರಯಾಣ ಮಾಡುವವರ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು ಪ್ರಯಾಣಿ ಕರಿಲ್ಲದೆ ಖಾಲಿ ಖಾಲಿ ಆಗಿ ಬಸ್ಸುಗಳು ಸಂಚರಿಸುತ್ತಿದ್ದವು.
