ಉದಯವಾಹಿನಿ, ಮಂಡ್ಯ, : ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಡೊಳ್ಳಿನ ಸದ್ದು, ಕುಣಿತದ ಮೂಲಕ ಕಾವೇರಿ ಹೋರಾಟವನ್ನು ಕಲಾವಿದರು ಮುಂದುವರಿಸಿದ್ದು ವಿಶೇಷವಾಗಿತ್ತು.
ನಗರದ ಸರ್.ಎಂ.ವಿ ಪ್ರತಿಮೆ ಎದುರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ನಿರಂತರ ಧರಣಿ ಬೆಂಬಲಿಸಿ ಸಂತೆ ಕಸಲಗೆರೆ ಹಾಗೂ ಕಾರಸವಾಡಿ ಗ್ರಾಮದ ಜನತೆ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ನಡೆಸಿದರು.ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ರೈತ ಹಿತ ರಕ್ಷಣಾ ಸಮಿತಿಯ ಮುಖಂಡರ ಜೊತೆಗೂಡಿ ಮಾನವ ಸರಪಳಿ ರಚಿಸಿ ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಮೆರವಣಿಗೆ ಹೊರಟರು. ಡೊಳ್ಳಿನ ಸದ್ದಿನೊಂದಿಗೆ ಹೆಜ್ಜೆ ಹಾಕಿದ ಹೋರಾಟಗಾರರು ನಿರಂತರ ಧರಣಿ ಸ್ಥಳಕ್ಕೆ ತೆರಳಿ ಕೆಲಕಾಲ ಡೊಳ್ಳು ಕುಣಿತದ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು. ರಾಜ್ಯದ ಜನತೆ ನೀರಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ತಂದೊಡ್ಡಿರುವ ರಾಜ್ಯ ಸರ್ಕಾರ ನಿರ್ಲಕ್ಷ್ಯತನ ಬಿಟ್ಟು ಜವಾಬ್ದಾರಿಯುತ ಹೊಣೆಗಾರಿಕೆ ನಿರ್ವಹಿಸಬೇಕು ಎಂದರು. ಕೃಷ್ಣರಾಜ ಸಾಗರದಿಂದ ನೆರೆ ರಾಜ್ಯಕ್ಕೆ ಹರಿಸುತ್ತಿರುವ ನೀರನ್ನು ಸ್ಥಗಿತ ಮಾಡಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಸಂಕಷ್ಟ ಸನ್ನಿವೇಶದಲ್ಲಿ ಪರಿಹಾರ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.
