ಉದಯವಾಹಿನಿ, ಢಾಕಾ : ಢಾಕಾದಲ್ಲಿ ನಡೆದ ಭಾರೀ ಹಿಂಸಾತ್ಮಕ ಸರ್ಕಾರಿ ವಿರೋಧಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿಯ (ಬಿಎನ್‌ಪಿ) ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಇಸ್ಲಾಂ ಅಲಂಗೀರ್ ಅವರನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಅಲ್ಲದೆ ಅವರ ಪಕ್ಷದ ೧೨ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಲಾಗಿದೆ.
ಢಾಕಾದಲ್ಲಿ ವಾರಾಂತ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ನೀತಿಗಳ ವಿರುದ್ಧ ಹಾಗೂ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ ಹತ್ತು ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆ ನಡೆಸಿದ್ದರು. ಹಿಂಸಾತ್ಮಕ ಪ್ರತಿಭಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದು, ಅಲ್ಲದೆ ಓರ್ವ ಪ್ರತಿಭಟನಾಕಾರ ಕೂಡ ಸಾವಿಗೀಡಾಗಿದ್ದ ಎನ್ನಲಾಗಿದೆ. ಆದರೆ ಆಲಂಗೀರ್ ಅವರನ್ನು ಯಾವ ಕಾರಣಕ್ಕೆ ಬಂಧಿಸಲಾಯಿತು ಎಂಬುದು ಇನ್ನೂ ಅಧಿಕೃತವಾಗಿ ತಿಳಿದು ಬಂದಿಲ್ಲ ಎನ್ನಲಾಗಿದೆ.
