ಉದಯವಾಹಿನಿ, ಬೆಂಗಳೂರು: ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರು ಚಾಲಕನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಐದು ವರ್ಷಗಳಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್‍ನನ್ನು ಚಾಮರಾಜನಗರ ಜಿಲ್ಲೆಯಲ್ಲಿ ವಶಕ್ಕೆ ಪಡೆದು ನಗರಕ್ಕೆ ಕರೆ ತಂದಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕಳೆದ ಐದು ವರ್ಷಗಳಿಂದ ಕಿರಣ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇವರ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಕಾರು ಚಾಲಕರಾಗಿದ್ದಾರೆ.

ಕೆಲ ವಿಚಾರದಲ್ಲಿ ಪ್ರತಿಮಾ ಹಾಗೂ ಕಿರಣ್ ನಡುವೆ ಭಿನ್ನಾಭಿಪ್ರಾಯ ಇದ್ದುದರಿಂದ ಹತ್ತು ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದು ಹಾಕಿ ಬೇರೆ ಚಾಲಕ ಚೇತನ್‍ನನ್ನು ನಿಯೋಜಿಸಿಕೊಂಡಿದ್ದರು. ಇದೇ ಕಾರಣಕ್ಕೆ ಕಿರಣ್ ಮಹಿಳಾ ಅಧಿಕಾರಿ ಪ್ರತಿಮಾ ಅವರ ಮೇಲೆ ದ್ವೇಷ ಸಾಧಿಸಿ ಈತನೇ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿ ಆತನ ಹುಡುಕಾಟ ನಡೆಸುತ್ತಿದ್ದಾಗ ಕಿರಣ್ ಮೊಬೈಲ್ ಸ್ವಿಚ್‍ಆಫ್ ಮಾಡಿಕೊಂಡು ಚಾಮರಾಜನಗರ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದರು.ಖಚಿತ ಮಾಹಿತಿ ಮೇರೆಗೆ ಪೊಲೀಸರು ಚಾಮರಾಜನಗರ ಜಿಲ್ಲೆಗೆ ತೆರಳಿ ಕಿರಣ್‍ನನ್ನು ವಶಕ್ಕೆ ಪಡೆದು ನಗರಕ್ಕೆ ಕರೆ ತಂದು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!