ಉದಯವಾಹಿನಿ ಯಾದಗಿರಿ : ಬೆಳೆಹಾನಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಪಿಂಚಣಿ, ಜಾತಿ ಮತ್ತು ಆದಾಯ, ವಾಸಸ್ಥಳ, 371(ಜೆ), ಪಹಣಿ, ಲಾವಣಿ ಸೇರಿದಂತೆ ಹತ್ತಾರು ಸೌಲಭ್ಯಗಳನ್ನು ಒದಗಿಸುವ ನಾಡಕಚೇರಿ ಸೇವೆಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ  ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಹೇಳಿದರು.ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿನ ಮಹಾತ್ವಾಕಾಂಕ್ಷಿ ಜಿಲ್ಲೆ ಯೋಜನೆಯಡಿ ನಾಡಕಚೇರಿ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರ-1 ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಕಚೇರಿಗೆ ಆಗಮಿಸಿದಾಗ ಅವರಿಗೆ ಮಾಹಿತಿ ನೀಡಿ, ಸ್ನೇಹಜೀವಿಯಾಗಿ ಕಾರ್ಯನಿರ್ವಹಿಸಿ ಜನಸಾಮಾನ್ಯರಿಗೆ ನರವಾಗಿ ಎಂದು ಕಚೇರಿಯ ಸಿಬ್ಬಂದಿಯವರಿಗೆ ತಿಳಿಸಿದರು.ಜಿಲ್ಲೆಯ 6 ತಾಲ್ಲೂಕುಗಳು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿ, ಈಗಾಗಲೇ 9 ಕೋ.ರೂ ಗಳ ಅನುದಾನ ಬಿಡುಗಡೆ ಮಾಡಲಾಗಿದ್ದು, ರೈತರಿಗೆ ಅನುಕೂಲವಾಗಲಿದೆ. ಈಗಾಗಲೇ  ಜಿಲ್ಲೆಗೆ ಕಂದಾಯ ಸಚಿವರು   ಭೇಟಿ ನೀಡಿ ಸ್ಥಿತಿಗತಿಗಳನ್ನು ಪರಿಶೀಲಿಸಿದ್ದಾರೆ ಎಂದು ಅವರು ತಿಳಿಸಿದರು. ಜಿಲ್ಲಾಧಿಕಾರಿ ಶ್ರೀಮತಿ ಡಾ.ಸುಶೀಲಾ. ಬಿ ಅವರು ಮಾತನಾಡಿ, ಐದು ಸಾವಿರಕ್ಕೂ  ಹೆಚ್ಚು ರೈತರು ಈ ನಾಡಕಚೇರಿ ವ್ಯಾಪ್ತಿಗೆ ಬರುವ ಕಾರಣ ಎಲ್ಲರೂ ಸರ್ಕಾರದ ಯೋಜನೆಗಳನ್ನು  ಸದುಪಯೋಗ ಪಡೆದುಕೊಳ್ಳಿ ಎಂದು ಅವರು ತಿಳಿಸಿದರು.ಇದೇ ಸಂದರ್ಭದಲ್ಲಿ ಯಾದಗಿರಿ ಮತಕ್ಷೇತ್ರದ ಶಾಸಕರಾದ ಶ್ರೀ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರ ಶ್ರೀಮತಿ ಗರಿಮಾ ಪನ್ವಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಇಲಾಖೆಯ ಉಪ ನಿರ್ದೇಶಕರಾದ ವೀರನಗೌಡ, ತಹಸೀಲ್ದಾರರಾದ ಉಮಾಕಾಂತ ಹಳ್ಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಬಿರಾದಾರ, ನಿರ್ಮಿತಿ ಕೇಂದ್ರದ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಕಿರಣಕುಮಾರ ಹೂಗಾರ, ಶಹಾಪುರ ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಮಿನಾಕ್ಷಮ್ಮ ಪಾಟೀಲ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಮಾರಿ ಚಂದ್ರಕಲಾ ದೊರೆ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!