ಉದಯವಾಹಿನಿ ರಾಮನಗರ: “ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ಇನ್ನು ಬಿಡದಿ ಯೋಜನಾ ಪ್ರಾಧಿಕಾರ ರದ್ದು ಮಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಪರಿವರ್ತಿಸಲು ಆದೇಶ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಬಿಡದಿಯ ಟೊಯೋಟಾ- ಕಿರ್ಲೋಸ್ಕರ್ ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಟಿಟಿಟಿಐ ತರಬೇತಿ ಘಟಕದ ವಿಸ್ತರಣಾ ಕಟ್ಟಡ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು ಮೆಟ್ರೋ ಯೋಜನೆ ಇಲ್ಲಿಯ ತನಕ ವಿಸ್ತರಿಸುವಂತೆ ಶಾಸಕರು, ಸಂಸದರು ಮನವಿ ಸಲ್ಲಿಸಿದ್ದರು. ಹೀಗಾಗಿ ಬಿಎಂಆರ್‌ಸಿಎಲ್ ಅವರಿಗೆ ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದ್ದೇನೆ ಎಂದರು.
ಬಿಡದಿ ಯೋಜನಾ ಪ್ರಾಧಿಕಾರವನ್ನು ತೆಗೆದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಮಾಡುತ್ತೇವೆ. ಬಿಡದಿಯಲ್ಲಿ ಸುಮಾರು 10 ಸಾವಿರ ಎಕರೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು, ಯಾವುದೇ ಉದ್ದೇಶಕ್ಕೆ ಬಳಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯ ಈ ಭಾಗದಲ್ಲೂ ಸಿಗಬೇಕು ಎನ್ನುವ ಉದ್ದೇಶ ನಮ್ಮದು. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ಈ ಎರಡು ಯೋಜನೆಗಳನ್ನು ಈ ಶುಭದಿನದಂದು ಘೋಷಿಸುತ್ತೇನೆ. ಈ ಯೋಜನೆಗಳ ಮೂಲಕ ಈ ಭಾಗ ಅಭಿವೃದ್ಧಿ ಆಗಬೇಕು, ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಬೇಕು ಎಂದರು.ಈ ಭಾಗದ ಆಸ್ಪತ್ರೆ, ವಿದ್ಯಾಸಂಸ್ಥೆಗಳು, ಕಾರ್ಮಿಕರು, ಅವರ ಮಕ್ಕಳು ಹೀಗೆ ಎಲ್ಲರಿಗೂ ಹೊಸ ಶಕ್ತಿ ತುಂಬಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ.ಟೊಯೋಟಾ ಸಂಸ್ಥೆ ಹೆಣ್ಣುಮಕ್ಕಳ ತರಬೇತಿ ಕೇಂದ್ರ ತೆರೆದಿರುವುದು ಸಂತೋಷದ ವಿಚಾರ. ಮಹಿಳೆಯರಿಗೆ ಶಕ್ತಿ ತುಂಬುವುದು ನಮ್ಮ ಸರ್ಕಾರದ ಸಂಕಲ್ಪ. ಶಕ್ತಿ ಯೋಜನೆ ಮೂಲಕ ಉಚಿತ ಬಸ್ ಪ್ರಯಾಣ ಮಾಡಿದ ಪರಿಣಾಮ ಮೈಸೂರು ದಸರಾ ಆಚರಣೆ ವೇಳೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇದರಿಂದ ಪ್ರವಾಸೋದ್ಯಮ, ವ್ಯಾಪಾರ ವಹಿವಾಟು ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಮಹಿಳೆಯರಿಗೆ ರಾಜಕೀಯದಲ್ಲೂ ಶೇ.33ರಷ್ಟು ಮೀಸಲಾತಿ ಜಾರಿಗೆ ತಂದು ಈ ಭಾಗದಲ್ಲಿ ಮಹಿಳಾ ಪ್ರತಿನಿಧಿಗಳು ಆಯ್ಕೆಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಗ್ರಾಮೀಣ ಭಾಗದ ಮಕ್ಕಳಿಗೆ ಪ್ರೋತ್ಸಾಹ ನೀಡಲು, 51 ಐಟಿಐ ಕಾಲೇಜುಗಳ ಜತೆ ಒಡಂಬಡಿಕೆ ಮಾಡಿಕೊಂಡು ಅಲ್ಲಿ ಅವರಿಗೆ ತರಬೇತಿ ನೀಡಿ ಉದ್ಯೋಗ ಸಿಗುವಂತೆ ಮಾಡಲಾಗುತ್ತಿದೆ. ಟೊಯೋಟಾ ಕಂಪನಿಯಲ್ಲಿ ಕೆಲಸ ಮಾಡುವುದರಿಂದ ಸಮಾಜದಲ್ಲಿ ಗೌರವ ಸಿಗುತ್ತದೆ ಎಂದ ಅವರು, ಟೊಯೋಟಾ ಸಂಸ್ಥೆಯವರು ಮುಂದಿನ ದಿನಗಳಲ್ಲಿ ಶಾಲೆಗಳ ಜೊತೆಗೆ ಇಂಜಿನಿಯರಿಂಗ್ ಕಾಲೇಜುಗಳ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಮನವಿ ಮಾಡಿದರು. ಸಚಿವ ಮಂಕಾಳ ವೈದ್ಯ, ಸಂಸದ ಡಿ ಕೆ ಸುರೇಶ್, ಶಾಸಕ ಎಚ್.ಸಿ.ಬಾಲಕೃಷ್ಣ, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಟೊಯೋಟಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸುದೀಪ್ ದಾಲ್ವಿ, ಕಾರ್ಯನಿರ್ವಾಹಕ ಉಪಾಧ್ಯಕ್ಷ ಸ್ವಪ್ನೇಶ್ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!