ಉದಯವಾಹಿನಿ, ಮಡಿಕೇರಿ: ಉಳುವುದಕ್ಕೆ ಭೂಮಿ ಕೊಡಿ, ಇರುವುದಕ್ಕೆ ಸೂರು ಕೊಡಿ, ಗೌರವದಿಂದ ಬದುಕುವ ಅವಕಾಶ ನೀಡಿ ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು. ದಲಿತ ಆದಿವಾಸಿ ಕೃಷಿ ಕಾರ್ಮಿಕರ ಸಂಘ, ಕರ್ನಾಟಕ ರೈತ ಸಂಘ ಹಾಗೂ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಸುದರ್ಶನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪಾದಯಾತ್ರೆ ನಡೆಸಿದರು.
ಬಳಿಕ, ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.
ಈ ವೇಳೆ ಮಾತನಾಡಿದ ದಲಿತ ಆದಿವಾಸಿ ಕೃಷಿ ಕಾರ್ಮಿಕರ ಸಂಘದ ಮುಖಂಡ ಡಿ.ಎಸ್.ನಿರ್ವಾಣಪ್ಪ, ‘2,800 ಕುಟುಂಬಗಳು ವಿವಿಧ ತೋಟಗಳ ಲೈನ್‌ಮನೆಯಲ್ಲಿದ್ದಾರೆ ಎಂದು ಜಿಲ್ಲಾಡಳಿತವೇ ಹೇಳಿದೆ. ಇವರು ವಾಸಿಸುವುದಕ್ಕೆ ಸೂರು ಹಾಗೂ ಜೀವನ ನಿರ್ವಹಣೆಗೆ ಭೂಮಿ ನೀಡಬೇಕು’ ಎಂದು ಒತ್ತಾಯಿಸಿದರು.
ಎಲ್ಲ ಸರ್ಕಾರಗಳೂ ಉಳ್ಳವರ ಪರವಾಗಿಯೇ ಕಾರ್ಯನಿರ್ವಹಿಸುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದ ಅವರು, ‘ಅಲೆಮಾರಿಗಳ ಬದುಕು ಅಲೆಮಾರಿಯಾಗಿಯೇ ಇದೆ. ಅವರ ಜೀವನದಲ್ಲಿ ಯಾವುದೇ ಬದಲಾವಣೆ ಸಾಧ್ಯವಾಗುತ್ತಿಲ್ಲ’ ಎಂದು ಕಿಡಿಕಾರಿದರು.
