ಉದಯವಾಹಿನಿ, ಕುಶಾಲನಗರ: ‘ಮಕ್ಕಳನ್ನು ಮೊಬೈಲ್‌ನಿಂದ ದೂರವಿರಿಸಿ ಅವರಲ್ಲಿ ಅಪೌಷ್ಟಿಕತೆ ಉಂಟಾಗದಂತೆ ಎಚ್ಚರ ವಹಿಸಿದರೆ ಮಾತ್ರ ಮಕ್ಕಳಲ್ಲಿ ಕಣ್ಣಿನ ಆರೋಗ್ಯ ಕಾಪಾಡಲು ಸಾಧ್ಯ’ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ ನಾಯಕ್ ಹೇಳಿದರು.
ಸಮೀಪದ ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹಾಸನದ ಅಮ್ಮ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ನೇತ್ರ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಬಾಲ್ಯದಿಂದಲೇ ಅತಿಯಾಗಿ ಮೊಬೈಲ್ ವೀಕ್ಷಿಸುವುದರಿಂದ ತಮ್ಮ ಕಣ್ಣಿನ ದೃಷ್ಟಿಯನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಪೋಷಕರು ಈ ಬಗ್ಗೆ ಗಮನಹರಿಸಬೇಕು. ಕಣ್ಣು ಮನುಷ್ಯನ ಬಹಳ ಮುಖ್ಯವಾದ ಅಂಗವಾಗಿದ್ದು, ಅದನ್ನು ಜೋಪಾನ ಮಾಡಬೇಕಾಗಿದೆ’ ಎಂದರು.
‘ಕೊಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಹೇಳಿದರು.
ತಾಲ್ಲೂಕು ವೈದ್ಯಾಧಿಕಾರಿ ಇಂದೂಧರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ. ಶಾಂತಿ, ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನಾ, ವೈದ್ಯೆ ತೇಜಸ್ವಿನಿ ಇದ್ದರು.
