ಉದಯವಾಹಿನಿ, ಬೆಂಗಳೂರು: ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡಿರುವ ನಿಗೂಢ ನ್ಯುಮೋನಿಯಾ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ರಾಜ್ಯದಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರತಂದಿದೆ.ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯವನ್ನು ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನ್ಯುಮೋನಿಯಾ ಚಿಕಿತ್ಸೆಗೆ ಅಗತ್ಯವಿರುವ ಮಾತ್ರೆಗಳು ಹಾಗೂ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಆಗತ್ಯವಿರುವಷ್ಟು ಪಿಪಿಇ ಕಿಟ್ ಗಳನ್ನು ದಾಸ್ತಾನು ಮಾಡಿಕೊಳ್ಳುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಶೀತ-ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆಗಳುಳ್ಳ (ಸಾರಿ) ಪ್ರಕರಣಗಳನ್ನು ಆರೋಗ್ಯ ಇಲಾಖೆಯ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಯಾವುದೇ ಪ್ರದೇಶಗಳಲ್ಲಿ ಈ ಪ್ರಕರಣಗಳ ಸಂಖ್ಯೆ ಅನಿಯಮಿತ ಪ್ರಮಾಣದಲ್ಲಿ ಹೆಚ್ಚಳವಾದರೆ ವಿಶೇಷ ನಿಗಾ ಇರಿಸಬೇಕು.ಅಂತಹ ಪ್ರಕರಣಗಳ ಪರೀಕ್ಷಾ ವರದಿಗಳ ಕುರಿತು ಆರೋಗ್ಯ ಇಲಾಖೆಯ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
