ಉದಯವಾಹಿನಿ, ಬೆಂಗಳೂರು: ನೂತನ ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಾಳೆ ದೆಹಲಿಗೆ ತೆರಳಲಿದ್ದು, ಪಕ್ಷದ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಜಯೇಂದ್ರ ಅವರ ಮೊದಲ ದೆಹಲಿ ಭೇಟಿ ಇದಾಗಿದೆ.
ಅಲ್ಲದೆ ಅಶೋಕ್ ಕೂಡ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಪಕ್ಷದ ಹಿರಿಯರನ್ನು ಭೇಟಿ ಮಾಡುತ್ತಿರುವುದು ಇದೇ ಮೊದಲು. ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವರನ್ನು ಭೇಟಿಯಾಗಿ ಪಕ್ಷದ ಬೆಳವಣಿಗೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ತಮ್ಮನ್ನು ಅತ್ಯಂತ ಜವಾಬ್ದಾರಿಯುತ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಲು ವಿಜಯೇಂದ್ರ ದೆಹಲಿಗೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ. ಅಶೋಕ್ ಕೂಡ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿರುವುದರಿಂದ ತಮ್ಮ ಮೇಲೆ ವಿಶ್ವಾಸವಿಟ್ಟು ಮಹತ್ವದ ಜವಾಬ್ದಾರಿಯನ್ನು ನೀಡಿರುವ ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
