ಉದಯವಾಹಿನಿ, ಬೆಂಗಳೂರು: ರಾಜ್ಯಕ್ಕೆ ಪ್ರತ್ಯೇಕವಾದ ಶಿಕ್ಷಣ ನೀತಿ ರೂಪಿಸುವುದಾಗಿ ಪ್ರಣಾಳಿಕೆಯಲ್ಲಿ ಬರೆದು ಜನರಿಗೆ ಭರವಸೆ ನೀಡಿ ಮತ ಹಾಕಿಸಿಕೊಂಡು ಅಧಿಕಾರದಲ್ಲಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬಿಜೆಪಿಯವರು ಹೇಳಿದ್ದಾರೆ ಎಂಬ ಕಾರಣಕ್ಕೆ ಬದಲಾವಣೆ ಮಾಡಲಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿಯ ಬಗ್ಗೆ ಬಿಜೆಪಿಯವರು ವಿಧಾನಮಂಡಲದಲ್ಲಿ ಪ್ರಸ್ತಾಪ ಮಾಡುವುದಾದರೆ ಅದನ್ನು ಸ್ವಾಗತಿಸುತ್ತೇವೆ. ನಾವು ಚುನಾವಣೆಯ ಸಂದರ್ಭದಲ್ಲಿ ಸ್ಪಷ್ಟ ಭರವಸೆಯನ್ನು ನೀಡಿದ್ದೇವೆ. ಜನ ಅದಕ್ಕಾಗಿಯೇ ನಮಗೆ ಮತ ಹಾಕಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಭರವಸೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ ಎಂದು ಪುನರುಚ್ಚರಿಸಿದರು. ಇತ್ತೀಚೆಗೆ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಮಾತನಾಡಿದ ಇನೋಸಿಸ್‍ನ ನಾರಾಯಣಮೂರ್ತಿಯವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಭವಿಷ್ಯದ ಪ್ರಜೆಗಳನ್ನು ರೂಪಿಸುವಲ್ಲಿ ಉತ್ತಮವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಬಿಜೆಪಿ ಎನ್‍ಇಪಿ ಜಾರಿಯನ್ನು ರಾಜ್ಯದಲ್ಲಿ ಮುಂದುವರೆಸಬೇಕು ಎಂದು ಪಟ್ಟು ಹಿಡಿದಿದೆ. ಇದಕ್ಕೆ ತಿರುಗೇಟು ನೀಡಿದ ಮಧುಬಂಗಾರಪ್ಪ, ಭರವಸೆಗಳನ್ನು ಈಡೇರಿಸದೇ ಇದ್ದರೆ ರಾಜ್ಯದ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಪಂಚಖಾತ್ರಿಗಳ ರೀತಿಯಲ್ಲೇ ರಾಜ್ಯ ಶಿಕ್ಷಣ ನೀತಿ ರೂಪಿಸುವುದು ನಮ್ಮ ಆದ್ಯತೆ ಎಂದರು.

Leave a Reply

Your email address will not be published. Required fields are marked *

error: Content is protected !!