ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಬೇಡಿಕೆ ಇರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಸಂಖ್ಯಾಬಲವನ್ನು ಶೇ.25ರಷ್ಟು ಹೆಚ್ಚಿಸಿ 30 ಸಾವಿರ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಒಟ್ಟು 2443 ವಿದ್ಯಾರ್ಥಿ ನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಒಟ್ಟು 2,28,411 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶದ ಸೌಲಭ್ಯ ಕಲ್ಪಿಸಲಾಗಿದೆ. ಹರಿಹರ ವಿಧಾನಸಭಾ ಕ್ಷೇತ್ರದ 9 ವಿದ್ಯಾರ್ಥಿನಿಲಯಗಳಲ್ಲಿ 745 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿನಿಲಯಗಳ ಪ್ರವೇಶ ಪ್ರಕ್ರಿಯೆ ಮುಗಿದ ಬಳಿಕ ಜಿಲ್ಲೆಯಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿ ನಿಲಯಗಳಿಗೆ ತಾತ್ಕಲಿಕವಾಗಿ ಸ್ಥಾನಗಳನ್ನು ಆಂತರಿಕ ವರ್ಗಾವಣೆ ಮಾಡಿಕೊಂಡು ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆ ಎಂದರು.
ವಿದ್ಯಾರ್ಥಿ ನಿಲಯಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ದೊರಕದ ಅರ್ಹ ಹಿಂದುಳಿದ ವಿದ್ಯಾರ್ಥಿಗಳಿಗೆ ಪರ್ಯಾಯವಾಗಿ ಅನುದಾನದ ಲಭ್ಯತೆಯ ಅನುಸಾರ ವಿದ್ಯಾಸಿರಿ ಯೋಜನೆಯಡಿ ಪ್ರತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1500 ರೂ.ನಂತೆ ಗರಿಷ್ಠ 10 ತಿಂಗಳಿಗೆ 15 ಸಾವಿರ ರೂ.ನಂತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

 

Leave a Reply

Your email address will not be published. Required fields are marked *

error: Content is protected !!