ಉದಯವಾಹಿನಿ, ಬೆಂಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸಿಐಡಿಗೆ ವಹಿಸಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ಸಮ್ಮತಿ ಸೂಚಿರುವ ಹೈಕೋರ್ಟ್, ಡಿಐಜಿ ದರ್ಜೆಯ ಉನ್ನತ ಅಧಿಕಾರಿಯಿಂದ ತನಿಖೆ ನಡೆಸಬೇಕು ಮತ್ತು ಇಡೀ ತನಿಖೆಯ ಮೇಲೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು (ಡಿಐಜಿ) ನಿಗಾ ಇಡಬೇಕು ಎಂದು ನಿರ್ದೇಶನ ನೀಡಿದೆ.
ಈ ವಿಚಾರವಾಗಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಈ ವೇಳೆ ಸರಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಪ್ರಕರಣದಲ್ಲಿ ಸರಕಾರ ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ 5 ಎಫ್‌ಐಆರ್‌ಗಳ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಆದೇಶದ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
