ಉದಯವಾಹಿನಿ, ಬೆಂಗಳೂರು: ಗೂಳಿಹಟ್ಟಿ ಶೇಖರ್ ಗೆ ಆರ್.ಎಸ್.ಎಸ್ ಕಚೇರಿಗೆ ಪ್ರವೇಶ ನಿರಾಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಆರ್.ಎಸ್.ಎಸ್ ಮೇಲೆ ಬಹಳ ಜನ ಕೆಸರು ಎರಚುವ ಪ್ರಯತ್ನ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.
ಇಂತಹ ಸುಳ್ಳು ಪ್ರಚಾರ, ಒಳಸಂಚುಗಳನ್ನು ಮೀರಿ ಸಂಘ ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ ಕುರಿತಾಗಿ ಆರ್.ಎಸ್.ಎಸ್ ಸ್ಪಷ್ಟನೆ ನೀಡಿದೆ ಎಂದು ತಿಳಿಸಿದ್ದಾರೆ.
ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆಡಿಯೋ ಹೇಳಿಕೆಯಲ್ಲಿ ‘ ತಮಗೆ ಜಾತಿ ಕಾರಣಕ್ಕೆ ನಾಗಪುರದ ಡಾ.ಹೆಡಗೇವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು’ ಎಂದು ಆರೋಪಿಸಿದ್ದಾರೆ. ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರ, ಹುರುಳಿಲ್ಲದ ಆರೋಪ ಎಂದು ಆರ್.ಎಸ್.ಎಸ್ ತಿಳಿಸಿದೆ.
