ಉದಯವಾಹಿನಿ, ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮದರಾ(ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯಾಧರ್ ಕಾಂಬಳೆ ಅವರನ್ನು ಸೇವೆಯಿಂದ ಅಮಾನತ್ತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಡಾ. ಬಾಬು ಜಗಜೀವನರಾಮ್ ಅಭಿವೃದ್ಧಿ ಮತ್ತು ಹೋರಾಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.
ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಮದರಾ(ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದಣ್ಣೂರ್ ಗ್ರಾಮದಲ್ಲಿ 2018-2019ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ. ಬಾಬು ಜಗಜೀವನರಾಮ್ ಸಮುದಾಯ ಭವನವನ್ನು 12 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಸರ್ಕಾರ ಮಂಜೂರು ಮಾಡಿತ್ತು. ಆದಾಗ್ಯೂ, ಪಿಡಿಓ ಅವರು ಜಗಜೀವನರಾಮ್ ಭವನದ ಹೆಸರನ್ನು ತೆರವುಗೊಳಿಸಿ ಸಮುದಾಯಕ್ಕೆ ಹಾಗೂ ರಾಷ್ಟ್ರೀಯ ನಾಯಕರಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
