ಉದಯವಾಹಿನಿ, ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು, ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಕೆಲ ಚಾಲಕರಿಂದ ದೂರು ಕೇಳಿ ಬರುತ್ತಿದ್ದು, ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು. ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಾಂತರಾಜು ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ? ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ. ವರದಿ ವೈಜ್ಞಾನಿಕವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ.
