ಉದಯವಾಹಿನಿ, ಬೆಂಗಳೂರು: ರಾಜ್ಯದ ಪ್ರತಿ ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿ ನೇಮಕ ಮಾಡಬೇಕು. ಈ ಬಗ್ಗೆ ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಶಾಲಾ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಈ ಸಂಬಂಧ ತಮ್ಮ ‘ಎಕ್ಸ್’ ಖಾತೆ ಮೂಲಕ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ, ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
