ಉದಯವಾಹಿನಿ, ಬೆಂಗಳೂರು: ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಿದೆ.
ರಾಜಧಾನಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮೈಸೂರು, ಚಾಮರಾಜನಗರ, ದಾವಣಗೆರೆ, ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಮಾಜಿ ಸಚಿವರು, ಶಾಸಕರು, ಸಂಸದರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ನಗರದ ಫ್ರೀಡಂಪಾರ್ಕ್‍ನಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಅತ್ತ ಹುಬ್ಬಳ್ಳಿಯಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಠಾಣೆಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.ಈ ವೇಳೆ ಪ್ರತಿಭಟನಾನಿರತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು.
