
ಉದಯವಾಹಿನಿ, ಬೆಂಗಳೂರು: ಕಳೆದ ವಿಧಾನಭೆ ಚುನಾವಣೆ ಯಲ್ಲಿ ಟಿಕೆಟ್ ಸಿಗದೆ ಕಾಂಗ್ರೆಸ್ ಸೇರಿ ಬಿಜೆಪಿಗೆ ಭಾರೀ ಹಾನಿ ಮಾಡುವಲ್ಲಿ ಯಶಸ್ವಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷದತ್ತ ಮುಖ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆತರಲು ಪಕ್ಷದೊಳಗಿನ ಒಂದು ಬಣ ಭಾರೀ ಪ್ರಯತ್ನ ನಡೆಸಿದೆ. ಈಗಾಗಲೇ ರಾಷ್ಟ್ರೀಯ ಮುಖಂಡರೊಬ್ಬರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಇದು ಫಲಪ್ರದಕಾರಿಯಾಗಿದೆ ಎಂದು ತಿಳಿದುಬಂದಿದೆ.
ಭಾರೀ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ ಸೇರಿದ್ದ ಶೆಟ್ಟರ್‍ಗೆ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿಯೆ ಬಿಜೆಪಿಯ ಪ್ರಮುಖ ನಾಯಕರೊಬ್ಬರ ಜೊತೆ ಮಾತುಕತೆ ನಡೆಸಿದ್ದು, ಎಲ್ಲವೂ ನಿರೀಕ್ಷೆಯಂತೆ ನಡೆದರೆ ಪುನಃ ಮಾತೃ ಪಕ್ಷಕ್ಕೆ ಬರುವುದು ನಿಶ್ಚಿತ ಎನ್ನಲಾಗುತ್ತಿದೆ.
ಶೆಟ್ಟರ್ ಅವರನ್ನು ಬಿಜೆಪಿಗೆ ಸೆಳೆಯಲು ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಕೂಡ ವಿಶೇಷ ಆಸಕ್ತಿ ವಹಿಸಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಶೆಟ್ಟರ್ ಅವರನ್ನು ಕರೆತರುವ ಬಗ್ಗೆ ಚರ್ಚೆ ಮುಗಿದಿದೆ. ಇದಕ್ಕೆ ಬಹುತೇಕರು ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
