
ಉದಯವಾಹಿನಿ, ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ತನ್ನ ಮೈತ್ರಿಕೂಟದ ಪಾಲುದಾರ ಜೆಡಿಎಸ್‌ಗೆ ನೀಡಲು ಬಿಜೆಪಿ ನಿರ್ಧರಿಸಿದೆ ಎಂಬ ಬೆಳವಣಿಗೆಯಿಂದ ಆತಂಕಗೊಂಡಿರುವ ಸಂಸದೆ ಸುಮಲತಾ ಅಂಬರೀಶ್ ಶೀಘ್ರದಲ್ಲೇ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸುಮಲತಾ ಅಂಬರೀಶ್ ಪ್ರತಿನಿಧಿಸುತ್ತಿರುವ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಈಗಾಗಲೇ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.
ಸುಮಲತಾ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಆಗ ಬಿಜೆಪಿ ಸುಮಲತಾ ಅಂಬರೀಷ್ ಗೆ ಬೆಂಬಲ ನೀಡಿತ್ತು.ಪ್ರಧಾನಿ ನರೇಂದ್ರ ಮೋದಿ ಪ್ರಚಾರದಲ್ಲಿ ಸುಮಲತಾ ಅವರಿಗೆ ಮತ ನೀಡುವಂತೆ ಮನವಿ ಮಾಡಿದ್ದರು. ಅದಾದ ನಂತರ ಸುಮಲತಾ ಬಿಜೆಪಿ ಬೆಂಬಲಿಸಿದ್ದರು. ಆದರೆ ಇತ್ತೀಚಿನ ಬೆಳವಣಿಗೆಗಳಿಂದಾಗಿ ಕಂಗೆಟ್ಟಿರುವ ಸುಮಲತಾ ಅನುಯಾಯಿಗಳು ಮುಂಬರುವ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳು ವಿವರಿಸಿವೆ.
ವಿಜಯೇಂದ್ರ ಮತ್ತು ಪಕ್ಷದ ಪ್ರಮುಖರನ್ನು ಭೇಟಿ ಮಾಡಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಸುಮಲತಾ ಬೇಡಿಕೆ ಇಡುವ ಸಾಧ್ಯತೆ ಇದೆ. ಮತ್ತೊಂದೆಡೆ, ಗೆಲ್ಲುವ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಕಾಂಗ್ರೆಸ್ ಅವರನ್ನು ಪಕ್ಷಕ್ಕೆ ಸೆಳೆದು ತನ್ನ ಅಭ್ಯರ್ಥಿಯನ್ನಾಗಿ ಮಾಡಲು ಪ್ಲಾನ್ ಮಾಡಿದೆ.
