ಉದಯವಾಹಿನಿ, ಹಾವೇರಿ: ಆರು ಯುವಕರಿಂದ ಮುಸ್ಲಿಂ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಜನವರಿ 8 ರಂದು ಹೋಟೆಲ್‌ನಲ್ಲಿ ತಂಗಿದ್ದ ವೇಳೆ ಆರು ಜನ ಯುವಕರ ತಂಡ ಹೋಟೆಲ್ ಕೋಣೆಗೆ ನುಗ್ಗಿ ಇಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದೇವೆ. ತನಿಖೆ ನಡೆಯುತ್ತಿದೆ. ಅವರು ಯಾವುದೇ ಧರ್ಮ ಅಥವಾ ಜಾತಿಗೆ ಸೇರಿರಲಿ, ಅದನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳುತ್ತೇವೆ. ಯಾರಿಗೂ ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯಾರನ್ನೂ ಉಳಿಸುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.ಸರ್ಕಾರದಿಂದ ಯಾರೂ ಸಂತ್ರಸ್ತೆಯನ್ನು ಭೇಟಿ ಮಾಡಿ, ಸಾಂತ್ವನ ಹೇಳಿಲ್ಲ ಅಥವಾ ಯಾವುದೇ ಪರಿಹಾರ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂತ್ರಸ್ಥೆ ಕುಟುಂಬಸ್ಥರು ಈಗಷ್ಟೇ ಮನವಿ ಕೊಟ್ಟಿದ್ದಾರೆ. ಸರ್ಕಾರ ಅವರ ಮನವಿಯನ್ನು ಪರಿಗಣಿಸುತ್ತದೆ ಎಂದು ಹೇಳಿದರು.ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂಬ ಬಿಜೆಪಿಯ ಬೇಡಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗ ಪ್ರಕರಣದ ತನಿಖೆ ನಡೆಸುತ್ತಿರುವವರು ಪೊಲೀಸರು ಮತ್ತು ಎಸ್‌ಐಟಿಯ ಭಾಗವಾಗುವವರು ಪೊಲೀಸರೇ ಆಗಿರುತ್ತಾರೆ. ತನಿಖೆಗಳು ನಡೆಯುತ್ತಿವೆ. ಪ್ರಾಥಮಿಕ ತನಿಖಾ ವರದಿ ಬರಲಿ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ ಎಂಬ ಕಾರಣಕ್ಕೆ ನಾವು ಎಸ್ಐಟಿ ರಚಿಸಲು ಆಗುವುದಿಲ್ಲ’ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!