ಉದಯವಾಹಿನಿ, ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಸಮಾಜದ ಸ್ವಾಸ್ತ್ಯಕದಡುವ ಮತೀಯ ಶಕ್ತಿಗಳ ಮೇಲೆ ನಿಗಾ ವಹಿಸಿ, ಸುಳ್ಳು ಸುದ್ದಿಗಳನ್ನು ಹರಡಿ ಲಾಭ ಪಡೆಯುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಪರಾಮರ್ಶೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಮಲಲ್ಲಾ ಪ್ರತಿಷ್ಠಾಪನೆ, ಲೋಕಸಭಾ ಚುನಾವಣೆ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ವೇಳೆ ಕೋಮು ಗಲಭೆಗಳು ನಡೆಯದಂತೆ ಪೊಲೀಸ್ ಠಾಣಾ ಮಟ್ಟದಲ್ಲಿ ಮಾಹಿತಿಯನ್ನು ಕಲೆಹಾಕಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆಯ ಮೂಲ ಪತ್ತೆಹಚ್ಚಿ ಮಕ್ಕಳು ಪೋಷಕರಲ್ಲಿನ ಆತಂಕ ನಿವಾರಣೆ ಮಾಡಬೇಕು ಅತ್ಯಾಧುನಿಕ ತಂತ್ರಜ್ಞಾನದ ನೆರವು ಪಡೆದಿ ಇಮೇಲ್ ಬೆದರಿಕೆಗಳನ್ನು ಮಟ್ಟಹಾಕಲು ಮುಂದಾಗುವಂತೆ ಎಂದು ಸೂಚನೆ ನೀಡಲಾಗಿದೆ ಎಂದರು.
ಹಾವೇರಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ನೆಪದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಗಂಭೀರವಾಗಿ ಪರಿಗಣಿಸಿ ಯಾರೂ ಕೂಡ ಕಾನೂನು ಕೈಗೆತ್ತಿಕೊಂಡು ಮಹಿಳೆಯರ ಮೇಲೆ ದೌರ್ಜನ್ಯ ನಡೆಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಕೀತು ಮಾಡಿದರು.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಖಾಸಗಿ ಶಾಲಾ-ಕಾಲೇಜುಗಳಿಗೆ ಹುಸಿ ಬಾಂಬ್ ಇ-ಮೇಲ್ ಪತ್ತೆ ಕಾರ್ಯದ ಬಗ್ಗೆ ಪೊಲೀಸ್ ಅಧಿಕಾರಿಗಳಲ್ಲಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಲಾಗಿದೆ ಎಂದು ಹೇಳಿದರು.
