ಉದಯವಾಹಿನಿ, ಬೆಂಗಳೂರು: ಹಿಂದಿನ ಸರ್ಕಾರದಲ್ಲಿ ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ಏಕಸದಸ್ಯ ನ್ಯಾಯಾಂಗ ಆಯೋಗ ಇಂದು ರಾಜ್ಯಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದ್ದು, ಅದರಲ್ಲಿ ಹಗರಣದಲ್ಲಿ ಭಾಗಿಯಾದ ಮತ್ತಷ್ಟು ಅಧಿಕಾರಿಗಳು ಹಾಗೂ ಪ್ರಭಾವಿಗಳ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಆಗ ವಿರೋಧಪಕ್ಷವಾಗಿದ್ದ ಕಾಂಗ್ರೆಸ್ ಹಗರಣದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿತ್ತು. ವಿಧಾನಸಭೆ ಚುನಾವಣೆ ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಪಿಎಸ್‍ಐ ನೇಮಕಾತಿಯ ತನಿಖೆಗೆ ಕಳೆದ ಜುಲೈ 21 ರಂದು ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ಏಕಸದಸ್ಯ ನ್ಯಾಯಾಂಗ ಸಮಿತಿಯನ್ನು ರಚಿಸಿತ್ತು. ಆರಂಭದಲ್ಲಿ 3 ತಿಂಗಳ ಒಳಗಾಗಿ ವರದಿ ನೀಡಬೇಕು ಎಂಬ ಸೂಚನೆ ಇತ್ತಾದರೂ ಅದನ್ನು ಹಂತಹಂತವಾಗಿ ವಿಸ್ತರಣೆ ಮಾಡಲಾಗಿತ್ತು.
ಅಂತಿಮವಾಗಿ ಇಂದು ಸಮಿತಿ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ತನ್ನ ವರದಿ ಸಲ್ಲಿಸಿದೆ. ವರದಿಯಲ್ಲಿ ಪಿಎಸ್‍ಐ ನೇಮಕಾತಿಯಲ್ಲಿ ಹಗರಣ ನಡೆಯಲು ಕಾರಣಗಳೇನು? ಹಾಗೂ ಯಾವ ರೀತಿ ಪರೀಕ್ಷಾ ಅಕ್ರಮಗಳನ್ನು ನಡೆಸಲಾಗಿದೆ ಎಂಬ ಕುರಿತು ಸವಿಸ್ತಾರವಾದ ವರದಿ ನೀಡಿರುವುದಾಗಿ ತಿಳಿದುಬಂದಿದೆ. ಜೊತೆಗೆ ಮುಂದಿನ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿನ ಭ್ರಷ್ಟಾಚಾರಗಳನ್ನು ತಡೆಯಲು ತೆಗೆದುಕೊಳ್ಳಬೇಕಾದ ಮಹತ್ವದ ಶಿಫಾರಸ್ಸುಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
