ಉದಯವಾಹಿನಿ, ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನಲೆ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳನ್ನು ಮಾತ್ರ ದಳಪತಿಗಳಿಗೆ ಬಿಟ್ಟು ಕೊಡಲು ಬಿಜೆಪಿ ತೀರ್ಮಾನಿಸಿದೆ. ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಇಲ್ಲವೇ ಚಿಕ್ಕಬಳ್ಳಾಪುರ ಕ್ಷೇತ್ರಗಳು ಜೆಡಿಎಸ್ ಪಾಲಾಗಲಿದ್ದು, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದೆ.
ಮೂರು ಕ್ಷೇತ್ರಗಳನ್ನು ಬಿಟ್ಟು ಕೊಡುವ ವರಿಷ್ಠರ ನಿರ್ಧಾರವನ್ನು ಈಗಾಗಲೇ ಜೆಡಿಎಸ್‍ಗೂ ಮಾಹಿತಿ ನೀಡಲಾಗಿದೆ. ಆದರೆ ಹೆಚ್ಚುವರಿಯಾಗಿ ಒಂದು ಕ್ಷೇತ್ರವನ್ನು ಬಿಟ್ಟುಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದೆ ಎಂದು ತಿಳಿದುಬಂದಿದೆ.

ಕಳೆದ ಭಾನುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ಹಾಸನ, ಮಂಡ್ಯ, ಕೋಲಾರ ಇಲ್ಲವೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‍ಗೆ ಬಿಟ್ಟು ಕೊಡಲು ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ.
ಕೋಲಾರದಲ್ಲಿ ಹಾಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಇರುವುದರಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟು ಕೋಲಾರವನ್ನು ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳಲು ಬಿಜೆಪಿ ಲೆಕ್ಕಾಚಾರ ಹಾಕಿದೆ. ಯಡಿಯೂರಪ್ಪ ನಿವಾಸದಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ನಮ್ಮ ಪಕ್ಷಕ್ಕೆ ಕನಿಷ್ಠ ಪಕ್ಷ ಐದು ಲೋಕಸಭಾ ಕ್ಷೇತ್ರಗಳನ್ನು ನೀಡಬೇಕೆಂಬ ಪ್ರಸ್ತಾವನೆಯನ್ನು ಮುಂದಿಟ್ಟಿದ್ದರು.

 

Leave a Reply

Your email address will not be published. Required fields are marked *

error: Content is protected !!