ಉದಯವಾಹಿನಿ, ಧರ್ಮಸ್ಥಳ: ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದ್ದು, ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದ ಬಳಿ, ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರ ಸಾನ್ನಿಧ್ಯದಲ್ಲಿ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಫಲಕ ಅನಾವರಣ ಮಾಡಿ ಮಾತನಾಡಿದ ಅವರು, ಮರುಬಳಕೆ ಪ್ರವೃತ್ತಿ ಜನರಲ್ಲಿ ಕಡಿಮೆ ಆಗಿದ್ದು, ತ್ಯಾಜ್ಯ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳಿಗೆ ಸವಾಲಾಗಿದೆ. ಅದರಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ದೊಡ್ಡ ಸವಾಲಾಗಿದ್ದು, ಜನರಲ್ಲಿ ಜಾಗೃತಿ ಮೂಡದ ಹೊರತು ಇದಕ್ಕೆ ಪರಿಹಾರ ದೊರಕುವುದು ದುರ್ಲಭ ಎಂದರು.
ಅರಣ್ಯ ನಾಶ, ಪ್ರಕೃತಿಯ ಮೇಲಿನ ದಬ್ಬಾಳಿಕೆಯಿಂದ ಇಂದು ಜಾಗತಿಕ ತಾಪಮಾನ ಏರಿಕೆ ಆಗುತ್ತಿದೆ, ಹವಾಮಾನ ವೈಪರೀತ್ಯದಿಂದ ಜಾಗತಿಕ ಸಮಸ್ಯೆಗಳು ತಲೆದೋರುತ್ತಿವೆ, ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು ಹೀಗಾಗಿ ಸುಸ್ಥಿರ ಅಭಿವೃದ್ಧಿ ಇಂದಿನ ಅತ್ಯಗತ್ಯವಾಗಿದೆ ಎಂದು ಹೇಳಿದರು. ಆಹಾರದಲ್ಲಿ ಮಾಲಿನ್ಯ ಇದೆ, ಗಾಳಿಯಲ್ಲಿ ಮಾಲಿನ್ಯ ಇದೆ, ನೀರಿನಲ್ಲಿ ಮಾಲಿನ್ಯ ಇದೆ. ಇದರಿಂದ ಅನೇಕ ರೋಗ ರುಜಿನಗಳು ಜನರನ್ನು ಕಾಡುತ್ತಿದ್ದು, ಸಮುದಾಯ ಆರೋಗ್ಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.
