ಉದಯವಾಹಿನಿ, ಬೆಂಗಳೂರು: ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು. ಜತೆಗೆ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ರೈತರ ಸಾಲ ಮನ್ನಾ ಮಾಡಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಸಾವಿರಾರರು ರೈತರು ಬೃಹತ್ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ನಗರದಲ್ಲಿಂದು ಫ್ರೀಡಂ ಪಾರ್ಕಿನ ಮೈದಾನದಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಕಬ್ಬು ಬೆಳೆಗಾರರು ಹಾಗೂ ಗ್ರೀನ್ ಬಡ್ಸ್ ಮಹಿಳೆಯರು “ಬೆಂಗಳೂರು ಚಲೋ” ಪ್ರತಿಭಟನೆ ನಡೆಸಿ, ೨೦೨೪ರ ರಾಜ್ಯ ಬಜೆಟ್ ಅನ್ನು ಕೃಷಿಗೆ ಪೂರಕವಾಗಿ ಮಂಡಿಸಬೇಕೆಂದು ಘೋಷಣೆ ಕೂಗಿದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ರೈತರ ಸಾಲ ಮನ್ನಾ ಮಾಡಿದೆ. ಅದೇ ರೀತಿ ರಾಜ್ಯದಲ್ಲಿಯೂ ಸಾಲ ಮನ್ನಾ ಮಾಡಬೇಕು. ಕಬ್ಬಿನ ಎಫ್‌ಆರ್‌ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಈಗಾಗಲೇ ಕಬ್ಬು ಕಟಾವು, ಸಾಗಾಣಿಕೆ ದರ ಎಂದು ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಕಡಿತ ಮಾಡಿರುವ ಹೆಚ್ಚುವರಿ ಹಣವನ್ನು ರೈತರಿಗೆ ವಾಪಸ್ ಕೊಡಿಸಬೇಕು. ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಎಂಎಸ್‌ಪಿ ಖರೀದಿ ಕೇಂದ್ರಗಳನ್ನು ತೆರೆಯಬೇಕ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕುರುಬೂರು ಶಾಂತಕುಮಾರ್, ಬರ ಪೀಡಿತ ಪ್ರದೇಶಗಳ ರೈತರಿಗೆ ಕೂಡಲೇ ಎಕರೆಗೆ ೨೫,೦೦೦ ರೂ. ಪರಿಹಾರ ನೀಡಬೇಕು. ಅತಿವೃಷ್ಟಿ, ಪ್ರಕೃತಿ ವಿಕೋಪ, ಬೆಳೆ ನಷ್ಟಕ್ಕೆ ವೈಜ್ಞಾನಿಕವಾಗಿ ಸಂಪೂರ್ಣ ಬೆಳೆ ನಷ್ಟ ಪರಿಹಾರ ಸಿಗುವಂತಾಗಬೇಕು. ಕೃಷಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಎಪಿಎಂಸಿಯಲ್ಲಿ ಅಡಮಾನ ಸಾಲ ಯೋಜನೆ ಸದೃಢಗೊಳಿಸಬೇಕು ಎಂದರು.
ಅಲ್ಲದೆ, ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಹೆಚ್ಚು ಅನುದಾನ ಮೀಸಲಿಡಬೇಕು. ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು, ಟ್ರ್ಯಾಕ್ಟರ್ ಬಿಡಿ ಭಾಗಗಳಿಗೆ ಜಿಎಸ್‌ಟಿ ತೆರಿಗೆ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಹೇಳಿದರು.
