ಉದುಯವಾಹಿನಿ , ಹಾಸನ : ಜಿಲ್ಲೆಯಲ್ಲಿ ಆನೆಗಳ ಹಾವಳಿ ಮುಂದುವರಿದಿದ್ದು, ಬೇಲೂರಿನ ಮಲಸಾವರ ಗ್ರಾಮದಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸಿದೆ. ಬೆಳೆಗಳ ಮೇಲೆ ದಾಳಿ ನಡೆಸುತ್ತಿರುವುದನ್ನು ರೈತರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಅರಣ್ಯಾಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಲಕ್ಷಾಂತರ ರೂ. ಬೆಲೆ ಬಾಳುವ ಬೆಳೆ ನಷ್ಟದಿಂದ ರೈತರು ಕಂಗಾಲಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಕಾಡಾನೆಗಳ ದಾಳಿಯಿಂದ ಆತಂಕಗೊಂಡಿರುವ ಸ್ಥಳೀಯ ಜನರು ಜೀವ ಭಯದಿಂದ ತೋಟ, ಗದ್ದೆ, ಹೊಲಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
೨೦ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಕಾಫಿ, ಕಾಳುಮೆಣಸು, ಏಲಕ್ಕಿ, ಶೇಂಗಾ ಗಿಡಗಳನ್ನು ಸಂಪೂರ್ಣ ನಾಶಪಡಿಸಿ ನಾಟಿ ಮಾಡಿದ್ದ ಭತ್ತದ ಗದ್ದೆಯನ್ನು ಸಂಪೂರ್ಣ ನಾಶಪಡಿಸಿವೆ.
ಗ್ರಾಮದ ತೀರ್ಥಕುಮಾರ್, ಕಲ್ಲೇಶ್, ವಿಜಯ್, ಮಲ್ಲೇಶ್ ಹಾಗೂ ಇತರ ರೈತರ ಜಮೀನಿನಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಎತ್ತರದ ಮರದ ಮೇಲೆ ಕುಳಿತಿದ್ದ ರೈತರೊಬ್ಬರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

Leave a Reply

Your email address will not be published. Required fields are marked *

error: Content is protected !!