ಉದುಯವಾಹಿನಿ, ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯ ದ್ವಿಗ್ವಿಜಯಕ್ಕೆ ರೂಪಿಸಬೇಕಾದ ರಣತಂತ್ರಗಳ ಬಗ್ಗೆ ದೆಹಲಿಯಲ್ಲಿಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಹಾಗೂ ಸಮಾವೇಶದಲ್ಲಿ ಸುದೀರ್ಘ ಸಮಾಲೋಚನೆಗಳು ನಡೆದಿವೆ.ನವದೆಹಲಿಯ ಭಾರತ್ ಮಂಟಪ್‌ನಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ಉಪಸ್ಥಿತಿಯಲ್ಲಿ ೨ ದಿನಗಳ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆ ನಡೆದಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿ ಮತ್ತೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಏನೆಲ್ಲಾ ರಣತಂತ್ರಗಳನ್ನು ರೂಪಿಸಬೇಕು ಎಂಬ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆದಿದೆ.ಕಳೆದ ೧೦ ವರ್ಷಗಳಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಪರಾಮರ್ಶೆಯು ನಡೆದಿದ್ದು, ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾರ್ಯಕ್ರಮಗಳ ಬಗ್ಗೆಯೂ ಚರ್ಚೆಗಳು ನಡೆದಿವೆ.ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ನಡೆದಿರುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಅತ್ಯಂತ ಮಹತ್ವದ್ದಾಗಿದ್ದು, ಚುನಾವಣೆ ಗೆಲುವಿನ ಕಾರ್ಯತಂತ್ರಗಳು ಕಾರ್ಯಕಾರಿಣಿಯಲ್ಲಿ ರೂಪಿತವಾಗಲಿವೆ.ಈ ಎರಡು ದಿನಗಳ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಸೇರಿದಂತೆ ಎಲ್ಲ ಕೇಂದ್ರ ಸಚಿವರು, ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು, ರಾಷ್ಟ್ರೀಯ ಮಂಡಳಿ ಸದಸ್ಯರುಗಳು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಎಲ್ಲ ರಾಜ್ಯಗಳ ಬಿಜೆಪಿ ಅಧ್ಯಕ್ಷರುಗಳು, ಮಾಜಿ ಮುಖ್ಯಮಂತ್ರಿಗಳು, ಹಿರಿಯ ಮುಖಂಡರುಗಳು ಸೇರಿದಂತೆ ೧೧ ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿದ್ದು, ಎರಡು ದಿನ ಲೋಕಸಭಾ ಚುನಾವಣೆಯ ತಯಾರಿ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ.
