ಉದಯವಾಹಿನಿ, ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸುಧೀರ್ ಮುರೋಳಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಜಿಲ್ಲೆಗಳ ನಾಯಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆಯವರು ಇತ್ತೀಚೆಗೆ ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಗಳಿವೆ. ಜಯಪ್ರಕಾಶ್ ಹೆಗ್ಡೆಯವರಿಗೆ ಟಿಕೆಟ್ ನೀಡಲು ಸ್ಥಳೀಯ ವಾಗಿ ತೀವ್ರ ವಿರೋಧ ವ್ಯಕ್ತವಾಗಿದೆ.
ಎರಡೂ ಜಿಲ್ಲೆಗಳ ಕಾಂಗ್ರೆಸ್ ನಾಯಕರು ಒಟ್ಟಾಗಿ ಮುಖ್ಯಮಂತ್ರಿ ಯವರ ಬಳಿ ನಿಯೋಗ ಬಂದಿದ್ದು, ಕಾಂಗ್ರೆಸ್ ಪಕ್ಷದಲ್ಲೇ ಇರುವ ಹಾಗೂ ಸ್ಥಳೀಯರಾದ ಸುಧೀರ್ ಮುರೋಳಿ ಟಿಕೆಟ್ ನೀಡಬೇಕೆಂದು ಒತ್ತಡ ಹೇರಿದ್ದಾರೆ. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ, ವಿನಯ್‍ಕುಮಾರ್ ಸೊರಕೆ, ಕಾಂಗ್ರೆಸ್ ನಾಯಕರಾದ ಕಾರ್ಕಳದ ಉದಯ್‍ಕುಮಾರ್ ಶೆಟ್ಟಿ, ಕುಂದಾಪುರದ ದಿನೇಶ್ ಹೆಗ್ಡೆ, ಉಡುಪಿಯ ರಮೇಶ್ ಕಾಂಚನ್, ಉಡುಪಿಯ ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ಸೌರವ್ ಬಲ್ಲಾಳ್, ಉಡುಪಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಉಮಾ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ನಿಯೋಗ ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದೆ.
