ಉದಯವಾಹಿನಿ, ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ 5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಹೈಕೋರ್ಟ್ ಈ ಆದೇಶದಿಂದ ಇದೇ ಮಾರ್ಚ್ 9ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.

ಕಳೆದ ಡಿಸೆಂಬರ್ನಲ್ಲಿ ರಾಜ್ಯ ಸರ್ಕಾರ 2024ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಿಗದಿಪಡಿಸಿ ಸುತ್ತೋಲೆ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನರಹಿತ ಶಾಲೆಗಳ ಸಂಘ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಎರಡೂ ಕಡೆಯ ವಾದವನ್ನು ಆಲಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ರವಿ ಹೊಸಮನಿ ಅವರು ಇಂದು ತೀರ್ಪು ಪ್ರಕಟಿಸಿ ಸರ್ಕಾರ ಹೊರಡಿಸಿದ್ದ ಸುತ್ತೋಲೆ ಯನ್ನು ರದ್ದುಪಡಿಸಿದರು.
ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರಿ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಅರ್ಜಿದಾರರ ಸಂಘ ಕೋರಿತ್ತು.

ಖಾಸಗಿ ಶಾಲೆಗಳ ಪರವಾಗಿ ವಕೀಲ ಸುದರ್ಶನ್ ವಾದ ಮಂಡಿಸಿದ್ದರೆ, ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಂದಿನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು 5ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು.

 

Leave a Reply

Your email address will not be published. Required fields are marked *

error: Content is protected !!