ಉದಯವಾಹಿನಿ, ಬೆಂಗಳೂರು: ಆಪರೇಷನ್ ಕಮಲದಿಂದ ಬಿಜೆಪಿ ಸೇರಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದ ಡಾ.ಸುಧಾಕರ್, ಶಿವರಾಂ ಹೆಬ್ಬಾರ್ ಸೇರಿದಂತೆ ಐದು ಮಂದಿ ವಲಸಿಗರನ್ನೊಳಗೊಂಡು ಕಾಂಗ್ರೆಸ್ ಸಂಭವನೀಯರ ಪಟ್ಟಿಯನ್ನು ಹೈಕಮಾಂಡ್‍ಗೆ ರವಾನಿಸಿದೆ. ಇದರಲ್ಲಿ ಸುಮಾರು 15 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಏಕ ವ್ಯಕ್ತಿಯ ಹೆಸರನ್ನು ಶಿಫಾರಸು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರಕ್ಕೆ ಹಾಲಿ ಸಂಸದ ಡಿ.ಕೆ.ಸುರೇಶ್ ಮರುಸ್ಪರ್ಧೆ ಮಾಡಲಿದ್ದಾರೆ. ಮೈಸೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಹೆಸರಿನ ಜೊತೆಗೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೆಸರು ಪ್ರಬಲವಾಗಿ ಕೇಳಿಬಂದಿದೆ.ಮಂಡ್ಯ ಕ್ಷೇತ್ರಕ್ಕೆ ಸ್ಥಳೀಯ ಕೆಲ ಮುಖಂಡರ ವಿರೋಧದ ನಡುವೆಯೂ ಉದ್ಯಮಿ ಸ್ಟಾರ್ ಚಂದ್ರು ಕಣಕ್ಕಿಳಿ ಯುವುದು ಖಚಿತವಾಗಿದೆ. ಕಲ್ಪತರು ನಾಡು ತುಮಕೂರಿಗೆ ಕಳೆದ ವಾರವಷ್ಟೇ ಬಿಜೆಪಿಯಿಂದ ವಲಸೆ ಬಂದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಟಿ.ಬಿ. ಜಯಚಂದ್ರಅವರು ತಮ್ಮ ಪುತ್ರ ಸಂತೋಷ್ ಅವರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ನಾಯಕ ನಿಖಿಲ್ ರಾಜ್ ಮೌರ್ಯ ಅವರ ಪರವಾದ ಒಲವು ವ್ಯಕ್ತಪಡಿಸಿದ್ದಾರೆ.ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಹಿರಿಯ ನಾಯಕ ವೀರಪ್ಪ ಮೊಯ್ಲಿ ಅದೇ ಕ್ಷೇತ್ರದಿಂದ ಮತ್ತೆ ಸ್ರ್ಪಧಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ಮೊದಲು ಜಿ-23 ಗುಂಪಿನಲ್ಲಿ ಸೇರಿಕೊಂಡು ರಾಹುಲ್ ಗಾಂಧಿ ವಿರುದ್ಧ ಬಂಡಾಯದ ಕಹಳೆ ಊದಿದ್ದರು ಎಂಬ ಆಕ್ಷೇಪಗಳಿವೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಎಂ.ಆರ್.ಸೀತಾರಾಮ್ ಅವರ ಪುತ್ರ ಹಾಗೂ ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರನ್ನು ಕಣಕ್ಕಿಳಿಸುವ ಉಮೇದಿನಲ್ಲಿದ್ದಾರೆ.

ಇತ್ತ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಬಿಡಿಎ ಅಧ್ಯಕ್ಷರೂ ಆಗಿರುವ ಶಾಂತಿನಗರದ ಶಾಸಕ ಎನ್.ಎ.ಹ್ಯಾರಿಸ್ ಅವರ ಹೆಸರು ಕೇಳಿಬರುತ್ತಿದೆ. ಈ ಕ್ಷೇತ್ರದಲ್ಲಿ ಹ್ಯಾರಿಸ್ ಜಯ ಗಳಿಸಿದ್ದಾದರೆ, ತೆರವಾಗುವ ಶಾಂತಿನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲ್ಪಾಡ್ ಅಧ್ಯಕ್ಷರಾಗಲಿದ್ದಾರೆ ಎಂಬ ಆಂತರಿಕ ಚರ್ಚೆಗಳಿವೆ. ಡಿ.ಕೆ.ಶಿವಕುಮಾರ್‍ರವರು ನಲ್ಪಾಡ್ ಬೆಂಬಲಕ್ಕಿದ್ದಾರೆ. ಅತ್ತ ಚಿಕ್ಕಬಳ್ಳಾಪುರ ಕ್ಷೇತ್ರ ರಕ್ಷಾ ರಾಮಯ್ಯ ಅವರಿಗೆ ಸಿಕ್ಕರೆ, ಬೆಂಗಳೂರು ಕೇಂದ್ರಕ್ಕೆ ಹ್ಯಾರಿಸ್‍ರವರಿಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪರಸ್ಪರ ಹಂಚಿಕೆ ರಾಜಕಾರಣದ ಮೂಲಕ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!