ಉದಯವಾಹಿನಿ,ಗೌರಿಬಿದನೂರು : ತಾಲ್ಲೂಕಿನ ೨೦೨೩-೨೪ ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಒಟ್ಟು ೩೭೯೧ ವಿದ್ಯಾರ್ಥಿಗಳು ಪರೀಕ್ಷೆಗೆ ಸನ್ನದ್ದರಾಗಿದ್ದಾರೆ, ಎಲ್ಲರೂ ನಿರ್ಬೀತಿಯಿಂದ ಪರೀಕ್ಷೆಯನ್ನು ಎದುರಿಸುವಂತಾಗಬೇಕು ಎಂದು ತಹಶೀಲ್ದಾರ್ ಮಹೇಶ್ ಎಸ್.ಪತ್ರಿ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಸಾರಿಗೆ ಸೇರಿದಂತೆ ಇನ್ನಿತರ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ. ಈ ಬಾರಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಎದುರಾಗದಂತೆ ನಿಗಾ ವಹಿಸಬೇಕಾಗಿದೆ ಎಂದು ಹೇಳಿದರು.
ಬಿಇಒ ಕೆ.ವಿ.ಶ್ರೀನಿವಾಸಮೂರ್ತಿ ಮಾತನಾಡಿ, ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೧೭೫೫ ಹೆಣ್ಣು ಮತ್ತು ೧೯೧೧ ಗಂಡು ಸೇರಿದಂತೆ ಒಟ್ಟು ೩೬೬೬ ವಿದ್ಯಾರ್ಥಿಗಳು ಹಾಗೂ ೫೧ ಪುನರಾವರ್ತಿತ ಅಭ್ಯರ್ಥಿಗಳು, ೭೪ ಖಾಸಗೀ ಅಭ್ಯರ್ಥಿಗಳು ಸೇರಿದಂತೆ ಒಟ್ಟು ೩೭೯೧ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ನಗರದಲ್ಲಿ ೫ ಮತ್ತು ಗ್ರಾಮೀಣ ಭಾಗದಲ್ಲಿ ೯ ಸೇರಿದಂತೆ ಒಟ್ಟು ೧೪ ಪರೀಕ್ಷಾ ಕೇಂದ್ರಗಳು ಹಾಗೂ ೩೯೧ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಪರೀಕ್ಷೆಗೆ ಸಂಬಂಧಿಸಿದಂತೆ ಈಗಾಗಲೇ ಇಲಾಖೆಯ ವತಿಯಿಂದ ಎಲ್ಲ ವ್ಯವಸ್ಥೆಗಳನ್ನು ಸನ್ನದ್ಧಗೊಳಿಸಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟ ಬೆಸ್ಕಾಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಆರೋಗ್ಯ, ಸಾರಿಗೆ, ನಗರಸಭೆ, ತಾ.ಪಂ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಸಹಕಾರ ನೀಡುವ ಭರವಸೆ ನೀಡಿದ್ದಾರೆ.
