ಉದಯವಾಹಿನಿ, ಬೆಂಗಳೂರು: ರಾಜ್ಯದ ಬಾಕಿರುವ ಐದು ಲೋಕಸಭಾ ಕ್ಷೇತ್ರಗಳಿಗೆ ಇದೇ 22ರಂದು ಕೇಂದ್ರ ವರಿಷ್ಠರು ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆ ಚರ್ಚಿಸಲಾಗಿದೆ. 22ರಂದು ಪ್ರಧಾನಿ ನರೇಂದ್ರಮೋದಿ ಅವರ ಜೊತೆ ಚರ್ಚಿಸಿದ ಬಳಿಕ ಅಂತಿಮ ಪಟ್ಟಿ ಘೋಷಣೆಯಾಗಲಿದೆ ಎಂದು ತಿಳಿಸಿದರು.
ಬೆಳಗಾವಿ, ಉತ್ತರಕನ್ನಡ, ಕೋಲಾರ, ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಲಾಗಿದೆ. ಕೆಲವು ಕಾರಣಗಳಿಂದ ಚಿತ್ರದುರ್ಗ ಮತ್ತು ರಾಯಚೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಬಹುತೇಕ ಮೂರು ಕ್ಷೇತ್ರಗಳಿಗೆ 22ರಂದು ಅಭ್ಯರ್ಥಿ ಹೆಸರು ಘೋಷಣೆಯಾಗಬಹುದು. ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ಪಕ್ಷವೇ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು, ಪ್ರಧಾನಿ ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾದರೆ ನಾವು ಎಲ್ಲದಕ್ಕೂ ಸಿದ್ಧರಾಗಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಕೋಲಾರ ಕ್ಷೇತ್ರವನ್ನು ನಾವು ಜೆಡಿಎಸ್‍ಗೆ ಬಿಟ್ಟುಕೊಡಬೇಕು. ನಮ್ಮ ಸಂಸದರಾಗಿರುವ ಮುನಿಸ್ವಾಮಿಗೆ ಈಗಾಗಲೇ ಮಾಹಿತಿಯನ್ನು ನೀಡಲಾಗಿದೆ. ಇದಕ್ಕೆ ಅವರು ಸಮ್ಮತಿಸಿದ್ದಾರೆ. ಯಾವುದೇ ರೀತಿಯ ಅಸಮಾಧಾನವಿಲ್ಲ ಎಂದು ಬಿಎಸ್‍ವೈ ಸ್ಪಷ್ಟಪಡಿಸಿದರು.
ಟಿಕೆಟ್ ಆಕಾಂಕ್ಷಿಗಳಾಗಿದ್ದ ಜೆ.ಸಿ.ಮಾಧುಸ್ವಾಮಿ, ಕರಡಿ ಸಂಗಣ್ಣ ಸೇರಿದಂತೆ ಅಸಮಾಧಾನಿತರ ಜೊತೆ ನಾನು ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಅವರಿಗೆ ಯಾವುದೇ ರೀತಿಯ ದುಡುಕಿನ ನಿರ್ಧಾರ ಕೈಗೊಳ್ಳದಂತೆ ಸೂಚಿಸಲಾಗಿದೆ. ಎಲ್ಲವೂ ಸುಖಾಂತ್ಯ ಕಾಣಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
