ಉದಯವಾಹಿನಿ, ಬೆಂಗಳೂರು : ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ, ಮೇಲ್ವಿಚಾರಕರಿಗೆ ಇಂದು ಜಯನಗರದ ವಿಜಯಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಮಾತನಾಡುತ್ತಿರುವುದು.
ಬೆಂಗಳೂರು, ಮಾ.೨೨- ಮತದಾನದ ಪ್ರಮಾಣ ಕಡಿಮೆಯಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಈ ಬಾರಿ ಹೆಚ್ಚು ಆದ್ಯತೆ ನೀಡಿ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದಲ್ಲಿಂದು ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ರ ಸಂಬಂಧ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಜಯ ಕಾಲೇಜಿನಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಹಾಗೂ ಮೇಲ್ವಿಚಾರಕರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಗರದಲ್ಲಿ ಪ್ರತಿ ಚುನಾವಣೆಯಲ್ಲೂ ಮತದಾನ ಮಾಡುವಾಗ ನಿಗದಿತ ಶೇಖಡವಾರು ಪ್ರಮಾಣ ತಲುಪಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಬೂತ್ ಮಟ್ಟದ ಮೇಲ್ವಿಚಾರಕರು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂದು ತಿಳಿಸಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬರುವ ಮತಗಟ್ಟೆಗಳ ಪೈಕಿ ಕಳೆದ ಬಾರಿ ಸುಮಾರು ೯೩೫ ಮತಗಟ್ಟೆಗಳಲ್ಲಿ ಮತದಾನದ ಪ್ರಮಾಣ ಶೇಖಡವಾರು ಕಡಿಮೆಯಾಗಿರುತ್ತದೆ. ಈ ಸಂಬಂಧ ಆಯಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆ-ಮನೆಗೆ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ತಪ್ಪದೆ ಮತದಾನ ಮಾಡಲು ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.
ಮತದಾರರು ವೋಟರ್ ಹೆಲ್ಪ್ ಲೈನ್‌ಗೆ ಭೇಟಿ ನೀಡಿ ಮತದಾನ ಗುರುತಿನ ಚೀಟಿಯ ಸಂಖ್ಯೆ ನಮೂಸಿದರೆ ಸಾಕು ಮತಗಟ್ಟೆ ಹಾಗೂ ವಿಳಾಸದ ಲಭ್ಯವಾಗಲಿದೆ. ಇದೀಗ ಮತಗಟ್ಟೆಗೆ ಲೊಕೆಶನ್ ಹಾಕಿಕೊಂಡು ತೆರಳಲು ಸಾಪ್ಟ್ ವೇರ್ ಕೂಡಾ ಸಿದ್ದಪಡಿಸಲಾಗುತ್ತಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!