
ಉದಯವಾಹಿನಿ, ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಜರುಗುವ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳಿಗೆ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು ದಿನಾಂಕ 09-04-2024, ಮಂಗಳವಾರದಂದು ಚಂದ್ರಮಾನ ಯುಗಾದಿ ಮಹಾರಥೋತ್ಸವ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ಜರುಗಲಿದೆ.
ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳವಾದ ಪವಾಡ ಪುರುಷ ನೆಲೆಸಿರು ಮಲೆ ಮಾದಪ್ಪ ಸ್ವಾಮಿ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವವು. ಏಪ್ರಿಲ್ 06 ರಿಂದ 09 ರ ವರೆಗೆ ನಡೆಯಲಿದ್ದು ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಅವರ ನೇತೃತ್ವದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಯುಗಾದಿ ಜಾತ್ರಾ ಮಹೋತ್ಸವಕ್ಕೆ ಕರ್ನಾಟಕ ರಾಜ್ಯದ ನಾನಾ ಭಾಗಗಳಿಂದ ಈಗಾಗಲೇ ಮಾದಪ್ಪನ ಸನ್ನಿಧಿಗೆ ಕಾಲ್ನಡಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬರುತ್ತಿದ್ದು ಶುಕ್ರವಾರ ಸಂಜೆ ಕಾಲ್ನಡಿಗೆಯಲ್ಲಿ ಬಂದ ಭಕ್ತಾದಿಗಳು ರಂಗಮಂದಿರದ ಆವರಣ ಹಾಗೂ ಅಕ್ಕಪಕ್ಕದಲ್ಲಿ ನೆರಳಿಗಾಗಿ ವ್ಯವಸ್ಥೆಯನ್ನು ಕಲ್ಪಿಸಿರುವ ಸ್ಥಳಗಳಲ್ಲಿ ಬೀಡು ಬಿಟ್ಟಿದ್ದಾರೆ.
ಕರ್ನಾಟಕ ರಾಜ್ಯವಲ್ಲದೇ ನೆರೆ ರಾಜ್ಯವಾದ ತಮಿಳುನಾಡಿನಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಾಲಯಕ್ಕೆ ಬರುತ್ತಿದ್ದಾರೆ. ಯುಗಾದಿ ಜಾತ್ರಾ ಮಹೋತ್ಸವದಲ್ಲಿ ಬಹುಪಾಲು ನೆರೆ ರಾಜ್ಯದ ತಮಿಳುನಾಡಿನ ಭಕ್ತಾದಿಗಳೇ ಹೆಚ್ಚಾಗಿ ಕಂಡುಬರುತ್ತಾರೆ.
