ಉದಯವಾಹಿನಿ,ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರತೊಡಗಿದೆ. ರಣ ರಣ ಬಿಸಿಲಿನ ಝಳದ ನಡುವೆ ಚುನಾವಣಾ ಪ್ರಚಾರವೂ ಕಾವೇರುತ್ತಿದೆ. ತಮ್ಮ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ನಡೆಸಲು ರಾಜಕೀಯ ಪಕ್ಷಗಳ ಮುಖಂಡರು, ಹೈಕಮಾಂಡ್ ನಾಯಕರು ರಾಜ್ಯಕ್ಕೆ ದಾಂಗುಡಿ ಇಟ್ಟಿದ್ದಾರೆ.
ಮುಳಬಾಗಿಲಿನ ಕುರುಡುಮಲೆ ದೇವಸ್ಥಾನ ದಿಂದ ವಿಧ್ಯುಕ್ತವಾಗಿ ಪ್ರಚಾರ ಆರಂಭಿಸುವ ಮೂಲಕ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. ಪ್ರಧಾನಿ ಮೋದಿ ಅವರು ಇದೇ 14ರಂದು ರಾಜ್ಯಕ್ಕೆ ಆಗಮಿಸಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳ ಅಭಿಮಾನಿಗಳು ಬೆಂಬಲಿಗರು ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ, ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಅಭ್ಯರ್ಥಿಗಳು, ಹಾಗೂ ಅವರ ಬೆಂಬಲಿಗರು ಪಾರ್ಕ್, ಹೋಟೆಲ್, ಬಸ್ ನಿಲ್ದಾಣ ವಿವಿಧ ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿರುವುದು ಕಂಡುಬಂತು. ಮೊದಲ ಹಂತದ 14 ಕ್ಷೇತ್ರಗಳಲ್ಲಿ ಮತಪ್ರಚಾರ ಬಿರುಸುಗೊಂಡಿದೆ.
ಮುಖ್ಯಮಂತ್ರಿಯಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಮತ್ತು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದರು. ದಾಸರಹಳ್ಳಿ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಕ್ಷೇತ್ರದ ಅಭ್ಯರ್ಥಿ ರಾಜೀವ್‍ಗೌಡ ಅವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ಮಲ್ಲೇಶ್ವರಂನಲ್ಲಿ ರೋಡ್ ಶೋ ನಡೆಸುವ ಮೂಲಕ ಪ್ರಚಾರ ನಡೆಸಿದರು. ಮಹಾಲಕ್ಷ್ಮೀ ಲೇಔಟ್‍ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ಪಕ್ಷದ ವಿರುದ್ಧ ಸಿಎಂ ಸಿದ್ದರಾಮಯ್ಯ ಹರಿಹಾಯ್ದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರ ಪರವಾಗಿ ಪದ್ಮನಾಭ ನಗರದಲ್ಲಿ ಹಾಗೂ ಬೊಮ್ಮನಹಳ್ಳಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದರು.
ಬಿಜೆಪಿ ಹಾಗೂ ಜೆಡಿಎಸ್ ಬೆಂಗಳೂರು ಕೇಂದ್ರ ಹಾಗೂ ದಕ್ಷಿಣ ಕ್ಷೇತ್ರಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ ಮತದಾರರ ಮನವೊಲಿಕೆಯಲ್ಲಿ ತೊಡಗಿದ್ದರು. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದು, ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸಲಾಗುತ್ತಿದೆ.
