ಉದಯವಾಹಿನಿ, ಹೊಸಕೋಟೆ: ಜಿಲ್ಲೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಅನಧಿಕೃತ ಶಾಲೆಗಳಿದ್ದು, ಪ್ರತೀ ವರ್ಷ ನಾಯಿಕೊಡೆಗಳಂತೆ ಹತ್ತಾರು ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಿವೆ. ಹೈಟೆಕ್ ಮಾದರಿ ಶಿಕ್ಷಣ ನೀಡುತ್ತೇವೆಂಬ ಪ್ರಚಾರ ಗಿಟ್ಟಿಸಿ, ಪೋಷಕರನ್ನು ಮರುಳು ಮಾಡಿ, ಲಕ್ಷಕ್ಕೂ ಹೆಚ್ಚು ರೂ.ಡೊನೇಷನ್ ವಸೂಲಿ ಮಾಡುತ್ತಿದ್ದರೂ, ಶಿಕ್ಷಣ ಇಲಾಖೆ ಯಾವ ಶಾಲೆಗೆ ಮಾನ್ಯತೆ ಇದೆ. ಅನಧಿಕೃತ ಶಾಲೆ ಯಾವುದೆಂದು ಪೋಷಕರಿಗೆ ಅರಿವು ಮೂಡಿಸುವ ಕೆಲಸಕ್ಕೆ ಮುಂದಾಗುತ್ತಿಲ್ಲ.
ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾಗಿರುವ ವಿದ್ಯಾ ದೇಗುಲಗಳು ಮಕ್ಕಳ ಜೀವನದ ಜತೆ ಚೆಲ್ಲಾಟವಾಡುತ್ತಿವೆ. ಪೋಷಕರ ನೂರಾರು ಕನಸುಗಳನ್ನು ನುಚ್ಚು ನೂರು ಮಾಡುತ್ತಿವೆ. ಜಿಲ್ಲೆಯಲ್ಲಿ ತಲೆ ಎತ್ತಿರುವ ಅನಧಿಕೃತ ಶಾಲೆಗಳ ವಿರುದ್ಧ ಕಾನೂನು ಕ್ರಮವಹಿಸಿ ಕಡಿವಾಣ ಹಾಕಬೇಕಿದ್ದ ಶಿಕ್ಷಣ ಇಲಾಖೆ ಕಣ್ಣಾಮುಚ್ಚಾಲೆ ಆಡುತ್ತಿದೆ.
ಮಕ್ಕಳನ್ನು ಚೆನ್ನಾಗಿ ಓದಿಸಬೇಕು, ಒಳ್ಳೆಯ ಶಿಕ್ಷಣ ನೀಡಿ ಉನ್ನತ ಹುದ್ದೆಗೇರಿಸಬೇಕು ಅಂತ ಅದೆಷ್ಟೋ ಪೋಷಕರು ಹಗಲಿರುಳು ಕಷ್ಟಪಟ್ಟು ದುಡಿದು ಮಕ್ಕಳನ್ನು ಹೈಟೆಕ್ ಶಾಲೆಗಳಿಗೆ ದಾಖಲಾತಿ ಮಾಡಿಸುತ್ತಾರೆ. ಆದರೆ ಲಕ್ಷಾಂತರ ರೂ. ಶುಲ್ಕ ಕಟ್ಟಿಸಿಕೊಂಡ ಅನಧಿಕೃತ ಶಾಲೆಗಳು ಪೋಷಕರ ಆಸೆಗಳಿಗೆ ಬೆಂಕಿ ಹಚ್ಚಲು ಮುಂದಾಗಿವೆ.
ಶಾಲೆಗಳ ದಾಖಲಾತಿ ಪ್ರಕ್ರಿಯೆ ಶುರುವಾಗಿದ್ದರೂ, ಶಿಕ್ಷಣ ಇಲಾಖೆ ಮಾತ್ರ ಮೌನ ವಹಿಸಿದ್ದು, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸುವಂತೆ ಕ್ರಮ ಕೈಗೊಳ್ಳಬೇಕು. ಜತೆಗೆ ಆಯಾ ಜಿಲ್ಲೆಗಳ ಪ್ರಮುಖ ಪತ್ರಿಕೆಗಳಲ್ಲಿ ಈ ಪಟ್ಟಿ ಪ್ರಕಟವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದರೂ ಶಿಕ್ಷಣ ಇಲಾಖಾ ಧಿಕಾರಿಗಳು ಕ್ಯಾರೇ ಅನ್ನುತ್ತಿಲ್ಲ.
