ಉದಯವಾಹಿನಿ, ವಿಜಯಪುರ: ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಮಾನ್ಸೂನ್ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿದಿನವೂ ಕುಡಿಯುವ ನೀರಿನ ಗುಣಮಟ್ಟವನ್ನು ಪರೀಕ್ಷೆ ಮಾಡಬೇಕು. ನಗರ ಪ್ರದೇಶಗಳಲ್ಲಿ ಯುಜಿಡಿ ಹಾಗೂ ಚರಂಡಿಯ ಕೊಳಚೆ ನೀರು, ಕುಡಿಯುವ ಪೈಪ್‍ಲೈನ್ ಹಾದುಹೋದ ಕಡೆ ಬಹು ಎಚ್ಚರಿಕೆಯಿಂದ, ಕಾಮಗಾರಿ ನಡೆಯುವಾಗ ಪೈಪ್‍ಲೈನ್ ಒಡೆದು ಹೋಗದಂತೆ ಗಮನಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಜೊತೆ ಕೊಳಚೆ ನೀರು ಸೇರಿ ಕಲುಷಿತವಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಇದರಲ್ಲಿ ವಿಫಲವಾದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಏನಾದರೂ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ಶಾಲೆ, ಅಂಗನವಾಡಿ ಹಾಗೂ ವಸತಿನಿಲಯಗಳಲ್ಲಿ ಕಾಲ ಕಾಲಕ್ಕೆ ನೀರಿನ ಗುಣಮಟ್ಟವನ್ನು ಪರೀಕ್ಷಿಸಬೇಕು.
ಅಡುಗೆಗೆ ಶುದ್ಧ ನೀರು ಪೂರೈಸುವ ಕಾರ್ಯವನ್ನು ಜವಾಬ್ದಾರಿಯುತವಾಗಿ ಮಾಡಬೇಕು. ಯಾವ ಶಾಲೆ, ಅಂಗನವಾಡಿ ಹಾಗೂ ವಸತಿನಿಲಯಗಳಲ್ಲಿ ನೀರಿನ ಕೊರತೆ ಇದೆ ಎಂಬುದನ್ನು ತಿಳಿದುಕೊಂಡು ಅದನ್ನು ಬಗೆಹರಿಸುವ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಬತ್ತಿಹೋದ ಕೊಳವೆಬಾವಿಗಳ ಮಾಹಿತಿಯನ್ನು ಪಡೆದುಕೊಂಡು ಸ್ಥಳೀಯ ಸಂಸ್ಥೆಗಳ ಮೂಲಕ ಅಂತರ್ಜಲ ಮರುಪೂರಣ ಮಾಡುವ ಕಾರ್ಯವನ್ನು ಮಾಡಬೇಕು. ಜಲಜೀವನ್ ಮಿಷನ್ ಅಡಿಯಲ್ಲಿ ಶಾಲೆ, ಅಂಗನವಾಡಿ, ಹಾಸ್ಟೇಲ್ ಗಳಿಗೆ ಕುಡಿಯುವ ನೀರಿನ ಸಂಪರ್ಕ ಮಾಡಬೇಕು ಎಂದು ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!