ಉದಯವಾಹಿನಿ, ಕೋಲಾರ: ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಕೊಲೆಗಳಾಗಿದ್ದವು, ಎಷ್ಟು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆದಿತ್ತು ಎಂಬುದನ್ನು ಹೇಳಲು ನಾನು ಹೋಗುವುದಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣಗಳು ತಗ್ಗಿವೆ. ಅಪಪ್ರಚಾರದಲ್ಲಿ ಬಿಜೆಪಿಯದ್ದು ಎತ್ತಿದ ಕೈ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹರಿಹಾಯ್ದರು.ನಗರದ ಹೊರವಲಯದ ಹೋಟೆಲ್‌ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದಿತ್ತು. ಆಕೆ ರಾತ್ರಿ 9 ಗಂಟೆ ಸಮಯದಲ್ಲಿ ಅಲ್ಲಿಗೆ ಏಕೆ ಹೋಗಿದ್ದರು ಎಂಬುದಾಗಿ ಅಂದಿನ ಗೃಹಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇಂಥ ಬಿಜೆಪಿಯವರಿಗೆ ನಮ್ಮ ಸರ್ಕಾರದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು.
‘ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಮುಖ್ಯಮಂತ್ರಿ, ಗೃಹ ಸಚಿವರು ಸಮರ್ಥರಿದ್ದಾರೆ. ಕೆಲ ಘಟನೆಗಳು ನಡೆಯಬಾರದಿತ್ತು. ಅದಕ್ಕೆ ನಮ್ಮ ವಿಷಾದವಿದೆ. ಮುಂದಿನ ದಿನಗಳಲ್ಲಿ ಕಾನೂನು ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಪಡಿಸಲು ಪ್ರಯತ್ನ ನಡೆಸುತ್ತೇವೆ’ ಎಂದರು. ಬರ ಪರಿಹಾರ ರೈತರಿಗೆ ಇನ್ನೂ ಸಿಕ್ಕಿಲ್ಲ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿ, ‘ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಎಲ್ಲರ ರೈತರಿಗೂ ಸಿಕ್ಕಿದೆ. ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಯಾವತ್ತಾದರೂ ಅವರು ಒಳ್ಳೆಯ ವಿಚಾರ ಮಾತನಾಡಿದ್ದಾರೆಯೇ? ಎಲ್ಲಾ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್‌ನ ಜನಪ್ರಿಯ ಐದು ಗ್ಯಾರಂಟಿ ಯೋಜನೆಗಳನ್ನೇ ಕೆಟ್ಟ ಯೋಜನೆ ಎಂದು ಹೇಳಿದ ಬಿಜೆಪಿಯರು ಸಮಾಜ ವಿರೋಧಿಗಳು. ಬಿಜೆಪಿ ಹಾಗೂ ಜೆಡಿಎಸ್‌ನವರು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಬಗ್ಗೆ ಮಾತನಾಡುವ ನೈತಿಕತೆಯನ್ನು ಅವರು ಕಳೆದುಕೊಂಡಿದ್ದಾರೆ’ ಎಂದರು.
