ಉದಯವಾಹಿನಿ, ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ ವಹಿಸಬೇಕು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಚಂದ್ರಶೇಖರನ್‌ ಮನೆಗೆ ಭೇಟಿ ನೀಡಿದ ನಂತರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಈ ಎರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒಂದು ವಾರ ಗಡುವು ನೀಡುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಚಿವ ನಾಗೇಂದ್ರ ಗಮನಕ್ಕೆ ಬಾರದೇ ಈ ಅಕ್ರಮ ನಡೆದಿಲ್ಲ. ತೆಲಂಗಾಣ ರಾಜ್ಯದಲ್ಲಿ ಹಣಕಾಸಿನ ವರ್ಗಾವಣೆ ನಡೆದಿದೆ. ಲೋಕಸಭೆ ಚುನಾವಣೆ ಸಮಯದಲ್ಲಿ ಈ ಅವ್ಯವಹಾರ ನಡೆದಿದೆ. ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯ ಸರ್ಕಾರವನ್ನು ಎಟಿಎಂ ರೀತಿಯಲ್ಲಿ ಬಳಕೆ ಮಾಡಿಕೊಂಡಿದೆ. ನಾವು ಆರೋಪ ಮಾಡಿದಾಗ ದಾಖಲೆ ಎಲ್ಲಿ ಎನ್ನುತ್ತಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಮ್ಮ ಬಳಿ ದಾಖಲೆಗಳನ್ನು ಕೇಳುತ್ತಿದ್ದರು. ಈಗ ಸರ್ಕಾರ ಈ ಹಗರಣಕ್ಕೆ ಉತ್ತರವನ್ನು ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
ಇದು ರಾಜ್ಯದ ದೊಡ್ಡ ಅವ್ಯವಹಾರ. ಇದರಲ್ಲಿ ಕಾಂಗ್ರೆಸ್‌ ನಾಯಕರ ಕೈವಾಡ ಇರುವುದು ಸ್ಪಷ್ಟವಾಗಿದೆ. ತಕ್ಷಣ ಸಚಿವ ನಾಗೇಂದ್ರ ರಾಜಿನಾಮೆ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!