ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕರ್ನಾಟಕ ಇಂದು ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದು, ರೈತರು, ಕೂಲಿಕಾರ್ಮಿಕರು, ದೀನದಲಿತರು, ಬಡವರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಬರೀ ಗ್ಯಾರಂಟಿಗಳ ಡಂಗೂರ ಸಾರಲಾಗುತ್ತಿದೆ. ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಆಡಳಿತ ಪಕ್ಷದ ಶಾಸಕರ ಕ್ಷೇತ್ರಗಳಿಗೆ ನಯಾಪೈಸಾ ಹಣ ಬಿಡುಗಡೆಯಾಗುತ್ತಿಲ್ಲ. ಆರ್ಥಿಕ ಪರಿಸ್ಥಿತಿ ದಿವಾಳಿ ಹಂತಕ್ಕೆ ತಲುಪಿದೆ ಎಂದು ಆರೋಪಿಸಿದರು.

ರಾಜ್ಯದ ಹಣಕಾಸು ವ್ಯವಸ್ಥೆ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆಂನ್ಸಿ ಸಲಹೆ ಪಡೆಯಲು ಮುಂದಾಗಿರುವುದು ನಮೆಲ್ಲರಿಗೂ ಆಶ್ಚರ್ಯ ಉಂಟು ಮಾಡಿದೆ. 14 ಬಜೆಟ್‌ ಮಂಡಿಸಿರುವ ಮುಖ್ಯಮಂತ್ರಿಗೆ ಹಣಕಾಸು ಇಲಾಖೆ ನಿರ್ವಹಣೆ ಮಾಡಲು ಸಾಧ್ಯವಾಗದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳ ಸುತ್ತಮುತ್ತ ಅನೇಕ ಅಧಿಕಾರಿಗಳು ಇದ್ದಾರೆ. ಅಷ್ಟೇಲ್ಲ ಇರುವಾಗ ವಿದೇಶಿ ಕನ್ಸಲ್ಟೆನ್ಸಿ ನೇಮಕ ಮಾಡಿಕೊಳ್ಳಲು ಮುಂದಾಗಿರುವುದು ಯಾವ ಪುರುಷಾರ್ಥಕ್ಕೆ? ಎಲ್ಲ ರಂಗಗಳಲ್ಲೂ ವಿಫಲವಾಗಿರುವ ಸರ್ಕಾರ ಜನರ ಪಾಲಿಗೆ ಇದ್ದು ಸತ್ತಂತಾಗಿದೆ ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

error: Content is protected !!