ಉದಯವಾಹಿನಿ, ಹೊಸಪೇಟೆ: ಶಾಲಾ, ಕಾಲೇಜು ಹಾಸ್ಟೆಲ್‍ಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ಸಿಬ್ಬಂದಿ ಬೇಡಿಕೆ ಈಡೇರಿಸಬೇಕು ಎಂದು ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಶಾಸಕ ಎಚ್.ಆರ್. ಗವಿಯಪ್ಪನವರಿಗೆ ಮನವಿಪತ್ರ ಸಲ್ಲಿಸಲಾಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಘದಲ್ಲಿ ಕಳೆದ 15 ರಿಂದ 20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ಶಾಲಾ, ಕಾಲೇಜುಗಳ ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್ ಗಳು ಯಾವುದೇ ಭದ್ರತೆ ಇಲ್ಲದೆ ಕೆಲಸ ಮಾಡುತ್ತಾ ಬಂದಿದ್ದಾರೆ. ಇವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಬೇಡಿಕೆಗಳು ಹಾಸ್ಟೆಲ್‍ಗಳ ಹೊರಗುತ್ತಿಗೆ ನೌಕರರಿಗೆ ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು. 10 ವರ್ಷಗಳಿಂದ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರಬೇಕು. ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಪರಿಷ್ಕರಣ ಸಮಿತಿ ಸಭೆ ಸೇರಿ ತೀರ್ಮಾನ ಮಾಡಿ ಕನಿಷ್ಟ ವೇತನ 31 ಸಾವಿರ ರು. ಕೊಡಬೇಕು. ಕಾರ್ಮಿಕ ಇಲಾಖೆಯ ಕಾನೂನು ಪ್ರಕಾರ ವಾರದ ರಜೆ ಕೊಡಬೇಕು. ಕೆಲಸದ ಸಮಯ ನಿಗದಿ ಆಗಬೇಕು. ಪ್ರತಿ ತಿಂಗಳು 5ನೇ ತಾರೀಖು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣ ಪಾವತಿ ಮಾಡಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ರು. ಪರಿಹಾರ ಕೊಡಬೇಕು. ಕಾಯಂ ನೌಕರರ ಸ್ಥಳಗಳಿಗೆ ಕಾಯಂ ನೌಕರರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.
