ಉದಯವಾಹಿನಿ, ಬೆಂಗಳೂರು: ರಾಜ್ಯದ ಹಲವೆಡೆ ಡೆಂಘಿ ಮಹಾಮಾರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.ರಾಜಧಾನಿ ಬೆಂಗಳೂರು, ಹಾಸನ, ಶಿವಮೊಗ್ಗ, ಹಾವೇರಿ, , ಚಿಕ್ಕಮಗಳೂರು, ಮೈಸೂರು, ಚಿತ್ರದುರ್ಗ, ಧಾರವಾಡ ಸೇರಿದಂತೆ ಹಲವೆಡೆ ದಿನೇದಿನೇ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವು-ನೋವು ಕೂಡ ಸಂಭವಿಸುತ್ತಿದೆ. ಈಗಾಗಲೇ ಡೆಂಘಿಗೆ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1, ಶಿವಮೊಗ್ಗ 1, ಹಾಸನ 2, ಹಾವೇರಿಯಲ್ಲಿ 1, ಧಾರವಾಡದಲ್ಲಿ ಒಬ್ಬರು ಡೆಂಘಿ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಡೆಂಘಿ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 1,563, ಚಿಕ್ಕಮಗಳೂರು 491, ಮೈಸೂರು 479, ಹಾವೇರಿಯಲ್ಲಿ 451, ಚಿತ್ರದುರ್ಗ 265, ದಕ್ಷಿಣ ಕನ್ನಡ 233 ಮಂದಿ ಡೆಂಘಿ ಲಕ್ಷಣಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ವಿವಿಧೆಡೆ 5 ಸಾವಿರಕ್ಕೂ ಹೆಚ್ಚು ಮಂದಿಗೆ ಈ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಬೇಕೆಂದು ಸೂಚನೆ ನೀಡಲಾಗಿದೆ.ವ್ಯಾಪಕವಾಗಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ.ಡೆಂಘಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೋಗ ನಿಯಂತ್ರಣದ ಬಗ್ಗೆ ಕೈಗೊಳ್ಳುವ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಮಾರಕ ರೋಗ ಡೆಂಘಿ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಬಿಬಿಎಂಪಿ ಮನೆಮನೆ ಸಮೀಕ್ಷೆ ನಡೆಸಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಮುಂದಾಗಿದೆ.
1500 ಜನರ ತಂಡ ರಚಿಸಿ 12 ಲಕ್ಷ ಮನೆಗಳ ಸಮೀಕ್ಷೆ ನಡೆಸಲು ಯೋಜನೆ ರೂಪಿಸಿದ್ದು, ಪ್ರತಿ ವಾರ ಈ ತಂಡ ಮನೆಮನೆಗಳಿಗೆ ತೆರಳಿ ಡೆಂಘಿ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದೆ. ರೋಗ ಪತ್ತೆ ತಡೆಯುವಿಕೆ, ರೋಗ ಬರದಂತೆ ಎಚ್ಚರ ವಹಿಸುವ ಕಾರ್ಯಗಳಲ್ಲಿ ಮುಂದಾಗಿದೆ.
