ಉದಯವಾಹಿನಿ, ಬೆಂಗಳೂರು : ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಷ್ಠೆಯನ್ನು ಬದಿಗಿಟ್ಟು ಕೆಲಸ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟ್ಟಪ್ಪಣೆ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿಂದು ರಾಜ್ಯದ ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್‍ನ ಅಧ್ಯಕ್ಷರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಅವರು, ಕೆಲಸ ಮಾಡದೇ ಲೆಟರ್‍ಹೆಡ್‍ಗಾಗಿ ಪದಾಧಿಕಾರಿಗಳ ಸ್ಥಾನ ಪಡೆದಿರುವವರನ್ನು ಮುಲಾಜಿಲ್ಲದೇ ಕಿತ್ತೊಗೆಯುವುದಾಗಿ ಎಚ್ಚರಿಸಿದ್ದಾರೆ.
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಲಿದೆ. ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಸ್ಥಳೀಯ ನಾಯಕತ್ವ ಬಹಳ ಮುಖ್ಯ. ಹೀಗಾಗಿ ಪಕ್ಷದ ಪದಾಧಿಕಾರಿಗಳು, ಶಾಸಕರು, ಸಂಸದರು, ಸಚಿವರು ಪರಸ್ಪರ ಅನ್ಯೋನ್ಯತೆಯಿಂದ ಕೆಲಸ ಮಾಡಬೇಕು. ಶಾಸಕರು, ಪಕ್ಷದ ಅಧ್ಯಕ್ಷರು ಸಹಕಾರ ನೀಡುವುದಿಲ್ಲ ಎಂಬ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ. ವ್ಯಕ್ತಿಗತ ಪ್ರತಿಷ್ಠೆಗಳೇನೇ ಇದ್ದರೂ ಅದನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
ಕೆಲವು ಕಡೆ ಪಕ್ಷ ಸಂಘಟನೆ ಕಾರ್ಯ ನೀರಸವಾಗಿದೆ. ಹಲವು ಬಾರಿ ಎಚ್ಚರಿಕೆ ನೀಡಿದ ಹೊರತಾಗಿಯೂ ನಾಯಕರು ಎಚ್ಚೆತ್ತುಕೊಂಡಿಲ್ಲ. ಇನ್ನು ಮುಂದೆ ಪದೇ ಪದೇ ಎಚ್ಚರಿಕೆ ನೀಡುತ್ತಾ ಕುಳಿತುಕೊಳ್ಳುವುದಿಲ್ಲ. ಕೆಲಸ ಮಾಡದೇ ಇರುವವರನ್ನು ನಿರ್ದಾಕ್ಷಿಣ್ಯವಾಗಿ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಲಾಗುವುದು ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಮುಂದಿನ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಪ್ರತಿಷ್ಠೆಯ ಪ್ರಶ್ನೆ. ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯುವುದು ನಮ್ಮ ಆದ್ಯತೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಾಕೀತು ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!