ಉದಯವಾಹಿನಿ, ಬೆಳಗಾವಿ: ಪಶ್ಚಿಮ ಘಟ್ಟ ತೀರವಾದ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದ ಬೆಳಗಾವಿ ಇತರೆ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳ, ಜಲಾಶಯಗಳು ತುಂಬಿ ಹರಿಯುತ್ತಿರುವ ಪರಿಣಾಮ ಪ್ರವಾಹದ ಭೀತಿ ಎದುರಾಗಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗ್ರಾಮಗಳ ಹೊಲ ಗದ್ದೆಗಳು ಜಲಾವೃತವಾಗಿವೆ. ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಹಲವರನ್ನು ಸ್ಥಳಾಂತರ ಮಾಡಲಾಗುತ್ತಿದೆ.
ಘಟಪ್ರಭಾ ನದಿಗೆ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡಲಾಗಿದೆ. ಮಲಪ್ರಭಾ ನದಿಗೆ 15,000 ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದಾಗಿ ಬೆಳಗಾವಿ ಸಹಿತ ಬಾಗಲಕೋಟೆ, ಬಿಜಾಪುರ, ಧಾರವಾಡ ಜಿಲ್ಲೆಗಳ ನದಿ ತೀರದ ಗ್ರಾಮಗಳು ಮುಳುಗಡೆಯಾಗುವ ಆತಂಕ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 17 ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿದ್ದು, 34 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.
ಜಿಲ್ಲೆಯ ಚಿಕ್ಕೋಡಿ, ಖಾನಾಪುರ, ಮೂಡಲಗಿ, ಗೋಕಾಕ್, ನಿಪ್ಪಾಣಿ ತಾಲೂಕಿನ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದಾಗಿ ಗ್ರಾಮಗಳಿಗೆ ನೀರು ನುಗ್ಗುತ್ತಿದ್ದು, ಪ್ರವಾಹ ಭೀತಿ ಆರಂಭವಾಗಿದೆ.ಜಿಲ್ಲೆಯಲ್ಲಿ ಇನ್ನೂ ಎರಡು-ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್ಪಿ ಡಾ. ಭೀಮಾಶಂಕರ ಗುಳೇದ ಜಿಲ್ಲಾಯಲ್ಲಿ ಮಿಂಚಿನ ಸಂಚಾರ ಕೈಗೊಂಡಿದ್ದು, ಮಳೆ ಬಾಧಿತ ಖಾನಾಪುರ, ಚಿಕ್ಕೋಡಿ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿದರು.

Leave a Reply

Your email address will not be published. Required fields are marked *

error: Content is protected !!