ಉದಯವಾಹಿನಿ, ಹಾವೇರಿ: ‘ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ನಗರದ ಮೈಲಾರ ಮಹದೇವಪ್ಪ ವೃತ್ತದಿಂದ (ಹಳೇ ನಗರಸಭೆ ಕಚೇರಿ) ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಚೊಂಬು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ದೇಶದಲ್ಲಿ ಅತೀ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯ ಕರ್ನಾಟಕ. ನಮ್ಮ ರಾಜ್ಯಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ರಾಜ್ಯದ ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೇ, ಜನತೆಗೆ ನಿರಾಶೆ ಮಾಡಿದೆ’ ಎಂದು ಪ್ರತಿಭಟನಕಾರರು ದೂರಿದರು.
‘ರಾಜ್ಯದ ಅಭಿವೃದ್ಧಿಗೆ ಯಾವುದೇ ಹಣ ಮತ್ತು ವಿಶೇಷ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಬಿಜೆಪಿ ಜೊತೆಗಿನ ಮೈತ್ರಿಕೂಟದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಮಾತ್ರ ಹೆಚ್ಚಿನ ಅನುದಾನ ನೀಡಲಾಗಿದೆ. ರಾಜ್ಯಕ್ಕೆ ಚೊಂಬು ಮಾತ್ರ ಸಿಕ್ಕಿದೆ. ಹೀಗಾಗಿ, ಚೊಂಬು ಹಿಡಿದು ಪ್ರತಿಭಟನೆ ಮಾಡುತ್ತಿದ್ದೇವೆ’ ಎಂದು ಹೇಳಿದರು.
‘ಗ್ಯಾರಂಟಿ ಯೋಜನೆಗಳ ಮೂಲಕ ಕಾಂಗ್ರೆಸ್ ನೇತೃತ್ವದ ಸರ್ಕಾರ ಜನರ ಮನಗೆದ್ದಿದೆ. ಕಾಂಗ್ರೆಸ್ ಸರ್ಕಾರವಿರುವ ರಾಜ್ಯಕ್ಕೆ ಅನ್ಯಾಯ ಮಾಡಿರುವ ಕೇಂದ್ರ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸುವ ಕಾಲ ಬರುತ್ತದೆ’ ಎಂದು ಪ್ರತಿಭಟನಕಾರರು ತಿಳಿಸಿದರು . ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ‘ರೈತರು ಅತೀವೃಷ್ಠಿ-ಅನಾವೃಷ್ಠಿಯಿಂದ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇವರ ನೆರವಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಅನುದಾನ ನೀಡಬೇಕು. ಇಲ್ಲದಿದ್ದರೆ, ಗಂಭೀರ ಸ್ವರೂಪದ ಹೋರಾಟ ಮುಂದುವರಿಸಲಾಗುವುದು’ ಎಂದು ಹೇಳಿದರು.
