ಉದಯವಾಹಿನಿ, ಮೈಸೂರು: ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಅನ್ಯಾಯ ಮುಂದುವರೆದಿದೆ. ಇದರ ನಡುವೆ ಬಿಜೆಪಿಯ ನಾಯಕರು ಕರ್ನಾಟಕವನ್ನು ಅನಗತ್ಯವಾಗಿ ಭ್ರಷ್ಟ ಸರ್ಕಾರ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಪೂರ್ವಭಾವಿ ಸಭೆ ನಡೆಸಿದಾಗ ಭದ್ರಾ ಮೇಲ್ದಂಡೆ ಯೋಜನೆಗೆ ಈ ಮೊದಲು ಘೋಷಿಸಲಾಗಿದ್ದ 5300 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿಲ್ಲ. 15ನೇ ಹಣಕಾಸು ಆಯೋಗದ ಮಧ್ಯಂತರ ಶಿಫಾರಸಿನಲ್ಲಿ ಪೆರಿಫಿರಲ್ ರಿಂಗ್ ರಸ್ತೆಗೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ತಲಾ 3000 ಕೋಟಿ ರೂ. ನೀಡುವುದಾಗಿ ಘೋಷಿಸಲಾಗಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ. ಇದು ಅನ್ಯಾಯ ಅಲ್ಲವೇ..? ಎಂದರು. ನಿರ್ಮಲಾ ಸೀತಾರಾಮನ್ ರಾಜ್ಯದಿಂದ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಕುಮಾರಸ್ವಾಮಿಯವರು ಕೂಡ ಮಂಡ್ಯದ ಸಂಸದರಾಗಿ ಕೇಂದ್ರಸಚಿವರಾಗಿದ್ದಾರೆ. ಮಂಡ್ಯಕ್ಕಾದರೂ ಯಾವುದಾದರೂ ಯೋಜನೆ ಬಜೆಟ್‌ನಲ್ಲಿ ಪ್ರಕಟಿಸಬೇಕಿತ್ತು. ಕೈಗಾರಿಕಾ ಕಾರಿಡಾರ್ ಘೋಷಣೆ ಮಾಡಬಹುದಿತ್ತು. ಮೇಕೆದಾಟು ಯೋಜನೆ, ಏಮ್ಸೌ, ಐಐಟಿ ಸೇರಿದಂತೆ ಹಲವು ವಿಚಾರಗಳಿಗೆ ರಾಜ್ಯಸರ್ಕಾರ ಮನವಿ ಸಲ್ಲಿಸಿತ್ತು. ಯಾವುದೂ ಈಡೇರಿಲ್ಲ.
ಇದು ಅನ್ಯಾಯವಲ್ಲವೇ? ಎಂದು ಪ್ರಶ್ನಿಸಿದರು.ನಿರ್ಮಲಾ ಸೀತಾರಾಮನ್ ಬಂದಾಗಲೆಲ್ಲಾ ಸುಳ್ಳು ಹೇಳಿ ಹೋಗುತ್ತಾರೆ. ಈ ಬಾರಿಯೂ ಅದೇ ರೀತಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ನಮಗೆ ಭಾರಿ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು. ರಾಜ್ಯದಲ್ಲಿ ಕೈಗಾರಿಕೆಗಳು ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದು ನಿರ್ಮಲಾ ಸೀತಾರಾಮನ್ ದೂರಿದ್ದಾರೆ. ಇವರ ಅವಧಿಯಲ್ಲಿ ಭಾರತಕ್ಕೆ ವಿದೇಶಿ ಬಂಡವಾಳ ಹೂಡಿಕೆಯೇ ತಗ್ಗಿದೆ. ಅದಕ್ಕೆ ಮೂಲ ಕಾರಣ ಕೇಂದ್ರ ಹಣಕಾಸು ಸಚಿವರು ರೂಪಿಸಿದ ನೀತಿಗಳು ಎಂದು ಹೇಳಿದರು.
