ಉದಯವಾಹಿನಿ, ಬೆಂಗಳೂರು : ಕರಾವಳಿ, ಮಲೆನಾಡಿನ ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲೂ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.ಅರಬ್ಬೀ ಸಮುದ್ರದಲ್ಲಿ ಕೇರಳದ ಕರಾವಳಿಯಿಂದ ಗುಜರಾತಿನವರೆಗೂ ಸಮುದ್ರಮಟ್ಟದಲ್ಲಿ ಉಂಟಾಗಿರುವ ಮೇಲುಬ್ಬರ(ಟ್ರಫ್‌)ದ ಪರಿಣಾಮದಿಂದ ಭಾರೀ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇಂದು ಮತ್ತು ನಾಳೆ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗಬಹುದು. ಇದರಿಂದ ರಸ್ತೆ ಸಂಚಾರಕ್ಕೆ ಕೆಲವೆಡೆ ಅಡಚಣೆಗಳು, ನದಿಗಳಲ್ಲಿ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ನಿರಂತರವಾಗಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಲಿದೆ. ಪ್ರವಾಹ ಉಂಟಾಗುವುದರಿಂದ ನದಿ ತೀರದ ಪ್ರದೇಶಗಳ ಜನವಸತಿಗಳ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಜಾನುವಾರುಗಳ ಸಹಿತ ಜನರು ತೆರಳಲು ಸೂಚಿಸಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಒಂದೆರಡು ಕಡೆ ಮಾತ್ರ ಭಾರೀ ಮಳೆಯಾಗಬಹುದು ಎಂದು ಹೇಳಿದೆ.

 

Leave a Reply

Your email address will not be published. Required fields are marked *

error: Content is protected !!